ಮಂಡ್ಯ: ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಮತದಾರರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಟೀಕಿಸಿದರು.
ನಗರದ ಕಾಸರವಾಡಿಯಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಡಿಜಿಟಲ್ ಗೋಡೆ ಬರಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಂಗ್ರೆಸ್ ನಾಯಕರು ಮೊದಲು ಪ್ರಸ್ತುತ ತಮ್ಮ ಪಕ್ಷ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಘೋಷಣೆ ಮಾಡಿರುವ ಯೋಜನೆಗಳನ್ನು ಮೊದಲು ಅನುಷ್ಠಾನಗೊಳಿಸಲಿ, ಆನಂತರ ಕರ್ನಾಟಕದಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಮಾತನಾಡಲಿ. ಇನ್ನು ಕುಟುಂಬ ಪಕ್ಷವಾಗಿರುವ ಜೆಡಿಎಸ್ ಈಗ ಒಡೆದ ಮನೆಯಾಗಿದೆ. ಮೊದಲು ಅವರ ಪಕ್ಷವನ್ನು ಸರಿಮಾಡಿಕೊಳ್ಳಲಿ, ನಂತರ ರಾಜ್ಯದ ಜನರಿಗೆ ಭರವಸೆಗಳನ್ನು ನೀಡಲಿ ಎಂದು ಸಲಹೆ ನೀಡಿದರು.
ಜಿಲ್ಲಾದ್ಯಂತ ವಿಜಯ ಸಂಕಲ್ಪ ಅಭಿಯಾನವನ್ನು ನಮ್ಮ ಕಾರ್ಯಕರ್ತರು ನಡೆಸುತ್ತಿದ್ದಾರೆ. ಪ್ರತೀ ಮನೆ ಮನೆಗೂ ತೆರಳಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗುತ್ತಿದೆ. ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಜಿಲ್ಲೆಯಲ್ಲಿ ಗೆಲ್ಲಿಸುವ ಮೂಲಕ ಕೊಡುಗೆ ನೀಡಲಾಗುವುದು. ಪ್ರತಿಯೊಬ್ಬರಿಗೂ ಮನವರಿಕೆ ಮಾಡಿಕೊಟ್ಟು ಹೆಚ್ಚಿನ ಮತಗಳು ಬಿಜೆಪಿಗೆ ಹರಿದುಬರುವಂತೆ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ರಾಜ್ಯ ಮತ್ತು ರಾಷ್ಟ್ರದಲ್ಲಿ ನಮ್ಮ ಸರ್ಕಾರ ಜನೋಪಯೋಗಿ ಕೆಲಸಗಳನ್ನು ಮಾಡುತ್ತಿದ್ದು, ಇದನ್ನು ಕಂಡು ಹಲವು ಜನರು ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಇನ್ನು ಮೈಷುಗರ್ ಕಾರ್ಖಾನೆಗೆ ಕಬ್ಬು ಸರಬರಾಜಾಗುತ್ತಿಲ್ಲ ಎಂಬ ಕಾರಣಕ್ಕೆ ಸದ್ಯ ಸ್ಥಗಿತಗೊಂಡಿದೆ. ಆದರೆ ಮುಂದಿನ ಹಂಗಾಮಿನಲ್ಲಿ ಅತಿ ಹೆಚ್ಚು ಕಬ್ಬು ಅರೆಯಲು ಈಗಿನಿಂದಲೇ ಸಿದ್ಧತೆ ಕೈಗೊಳ್ಳಲಾಗಿದೆ. ಸಹ ವಿದ್ಯುತ್ ಘಟಕ, ಎಥೆನಾಲ್ ಘಟಕ ಸ್ಥಾಪನೆಗೆ ಮುಂದಾಗಿದೆ. ಶೀಘ್ರವೇ ಅದು ಚಾಲನೆಗೊಳ್ಳಲಿದೆ ಎಂದು ಹೇಳಿದರು.
ಬಿಜೆಪಿ ಮುಖಂಡರಾದ ವೆಂಕಟೇಶ್, ರಾ.ಸಿ.ಸಿದ್ದರಾಜುಗೌಡ, ಹೊಸಹಳ್ಳಿ ಶಿವು, ಮಹೇಶ್, ರಾಜು ಇತರರಿದ್ದರು.