ಶಿವಮೊಗ್ಗ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರದ ಮಂತ್ರಿಗಳ ಮೇಲೆ ಅನೇಕ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿವೆ. ಯಾವ ಮಂತ್ರಿಗಳ ಮೇಲೆ ಭ್ರಷ್ಟಾಚಾರದ ಆರೋಪವಿದೆಯೋ ಅವರ ವಿರುದ್ಧ ತನಿಖೆ ಮಾಡಿ. ತಪ್ಪು ಮಾಡಿರುವುದು ತಿಳಿದುಬಂದರೆ ಸಂಪುಟದಿಂದ ಕೈಬಿಡಿ ಎಂದು ಆಗ್ರಹಿಸಿದರು.
ರಾಜ್ಯದ ಮಂತ್ರಿಗಳ ಮೇಲೆ ನಿರಂತರವಾಗಿ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿವೆ. ಕೃಷಿ ಸಚಿವ ಚಲುವರಾಯಸ್ವಾಮಿ ಮೇಲೆ ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದರು.
ರಾಜ್ಯ ಸರ್ಕಾರ ಇನ್ನು 6 ತಿಂಗಳಲ್ಲಿ ಬೀಳಲಿದೆ ಎಂಬ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರಕ್ಕೆ ಅಸ್ಥಿರತೆ ಕಾಡಲಾರಂಭಿಸಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿ ಶೀಘ್ರ ತಯಾರಿಸಲಾಗುವುದು ಎಂದು ತಿಳಿಸಿದರು.