ಜಿಲ್ಲೆ

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ: ಕಾಲ್ತುಳಿತಕ್ಕೆ ರಾಜ್ಯಸರ್ಕಾರ ಕಾರಣವೆಂದು ಆಕ್ರೋಶ

ಕೆ.ಎನ್.ರಾಘವೇಂದ್ರ

ಮಂಡ್ಯ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತರಾಗಲು ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟಿಸಿದರು.

ಬಿಜೆಪಿ ನಗರ ಘಟಕ ಅಧ್ಯಕ್ಷ ವಸಂತ ಕುಮಾರ್ ನೇತೃತ್ವದಲ್ಲಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾವಣೆಗೊಂಡು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಯಾವುದೇ ಪೂರ್ವ ತಯಾರಿ ಇಲ್ಲದೇ ಕಾರ್ಯಕ್ರಮ ಆಯೋಜನೆ ಮಾಡಿರುವುದೇ ಕಾಲ್ತುಳಿತಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದ ನಾಯಕರ ಪ್ರಚಾರದ ಹುಚ್ಚಿಗಾಗಿ ಈ ಕಾಲ್ತುಳಿತ ಸಂಭವಿಸಿ 11 ಜನ ಮೃತಪಡುವಂತಾಗಿದೆ. ಈ ಘಟನೆಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು.

ಈ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ವಿಜಯೋತ್ಸವ ಆಚರಿಸಲು ಪೊಲೀಸ್ ಇಲಾಖೆ ಒಪ್ಪಿಗೆ ನೀಡಿಲ್ಲ. ವಿಧಾನಸೌಧದ ಮುಂದೆ ಸಹ ಕಾರ್ಯಕ್ರಮಕ್ಕೆ ಪೊಲೀಸರು ಒಪ್ಪಿಗೆ ನೀಡಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ ಮಾಡಿ ಅನುಮತಿ ಕೊಡಿಸಿದ್ದಾರೆ. ಇದಕ್ಕೆ ಸರ್ಕಾರ ಹೊಣೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಮಾಯಕರ ಸಾವಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ 7 ಜನ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ 4 ಜನ ಸಾವನ್ನಪ್ಪಿದ್ದಾರೆ. ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಎಲ್ಲಿಯೂ ದೊಡ್ಡ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬಾರದು ಎಂದು ಮನವಿ ಮಾಡಿದ್ದಾರೆ. ಆದರೆ, ಸರ್ಕಾರದ ನಾಯಕರು ಪ್ರಚಾರದ ಹುಚ್ಚಿಗಾಗಿ ವಿಧಾನಸೌಧ ಮೆಟ್ಟಿಲ ಮೇಲೆ ಆರ್‌ಸಿಬಿ ತಂಡದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದಾರೆ. ಇದರ ಬಗ್ಗೆ ಯಾವುದೇ ಗಂಭೀರವಾದ ಕ್ರಮ ಕೈಗೊಂಡಿಲ್ಲ. ಅಲ್ಲಿ ಜನರು ನೂಕು ನುಗ್ಗಲಿನಲ್ಲಿ ಸಿಲುಕಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಚಪ್ಪಲಿ, ಕಲ್ಲುಗಳನ್ನು ತೂರಿದ್ದಾರೆ ಎಂದು ದೂರಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಕಾಲ್ತುಳಿತದ ಬಗ್ಗೆ ಮಾಹಿತಿ ಬಂದಿತ್ತು. ಆದರೂ ಸನ್ಮಾನ ಮಾಡಿದ್ದು ಸರಿನಾ. ಇಲ್ಲಿ ರಾಜಕೀಯ ನಾಯಕರು, ವಿಧಾನಸೌಧ ಸಿಬ್ಬಂದಿ ಅವರ ಮಕ್ಕಳು, ಮೊಮ್ಮಕ್ಕಳು ಬಂದು ಸೆಲ್ಫಿ ತೆಗೆದುಕೊಂಡು ಮೋಜು ಮಾಡುತ್ತಿದ್ದರು. ಇಲ್ಲಿ ಅಮಾಯಕರ ಸಾವು ಸಂಭವಿಸಿದೆ. ಹಾಗಾಗಿ ಈ ಎಲ್ಲ ದುರಂತಗಳಿಗೆ ಸರ್ಕಾರವೇ ನೇರ ಹೊಣೆಯಾಗಿದ್ದು, ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಗುಪ್ತಚರ ಇಲಾಖೆಯ ಮುಖ್ಯಸ್ಥರು ಕೂಡ ಆಗಿರುವ ಮುಖ್ಯಮಂತ್ರಿ, ಇಂತಹ ಅವಘಡವನ್ನು ತಡೆಯುವಲ್ಲಿ ವಿಫಲವಾಗಿರುವ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಿವಲಿಂಗಪ್ಪ, ಎಂ.ಎಸ್. ನಂದೀಶ್, ಪ್ರಸನ್ನ ಕುಮಾರ್, ಸಿದ್ದರಾಜುಗೌಡ, ಸಿ.ಟಿ.ಮಂಜುನಾಥ್, ಜಿ.ವೈ.ಚಂದ್ರು ಇತರರಿದ್ದರು.