ಜಿಲ್ಲೆ

ನ.22ರಂದು ಉಡುಪಿಯಲ್ಲಿ ರಾಜ್ಯ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ

ಗೋಪಾಲಕೃಷ್ಣ ಪಾದೂರ್

ಉಡುಪಿ: ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆಶ್ರಯದಲ್ಲಿ ಯುವ ಮೋರ್ಚಾ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆ ನ.22ರಂದು ಬೆಳಿಗ್ಗೆ ಗಂಟೆ 10ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬೆಳಗ್ಗೆ 9ಕ್ಕೆ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಮತ್ತು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪ್ ಕುಮಾರ್ ಅವರನ್ನು ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ಉಡುಪಿ ಜೋಡುಕಟ್ಟೆಯಲ್ಲಿ ಸ್ವಾಗತಿಸಿ, ಬೈಕ್ ಜಾಥಾ ಮೂಲಕ ಮಣಿಪಾಲದ ರಜತಾದ್ರಿವರೆಗೆ ಕರೆತರಲಾಗುವುದು. ಡಿಸಿ ಕಚೇರಿ ಮುಂಭಾಗದಲ್ಲಿ ರಾಷ್ಟ್ರಾಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ಡಾ.ವಿ.ಎಸ್. ಆಚಾರ್ಯ ಪುತ್ಥಳಿಗೆ ಮಾಲಾರ್ಪಣೆಗೈದ ಬಳಿಕ ಸಭಾಂಗಣದವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದೆ ಎಂದು ಮಾಹಿತಿ ನೀಡಿದರು.


ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಸಂಸದ ತೇಜಸ್ವಿ ಸೂರ್ಯ ಸಭೆಯನ್ನು ಉದ್ಘಾಟಿಸಲಿದ್ದಾರೆ. ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ., ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ. ಸುಕುಮಾರ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ನ.21ರಂದು ಸಾಯಂಕಾಲ 6ಗಂಟೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಈ ವಿಶೇಷ ಕಾರ್ಯಕಾರಿಣಿ ಸಭೆಗೆ ರಾಜ್ಯ ಯುವ ಮೋರ್ಚಾ ಪದಾಧಿಕಾರಿಗಳು ಹಾಗೂ ರಾಜ್ಯದ ಎಲ್ಲಾ 39 ಸಂಘಟನಾತ್ಮಕ ಜಿಲ್ಲೆಗಳ ಯುವ ಮೋರ್ಚಾ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಅಪೇಕ್ಷಿತರಾಗಿದ್ದು, ಒಟ್ಟು 163 ಮಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ಉದ್ಯಾವರ ಮತ್ತು ಅಭಿರಾಜ್ ಸುವರ್ಣ ಉಪಸ್ಥಿತರಿದ್ದರು.