ಜಿಲ್ಲೆ

ರಾಜ್ಯ ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಆಗ್ರಹ

ಮಂಗಳೂರು: ರಾಜ್ಯದಲ್ಲಿ ಸರಣಿ ಹತ್ಯೆಗಳಿಂದ ಅರಾಜಕತೆ ಸೃಷ್ಟಿಯಾಗಿದ್ದು, ಬಿಜೆಪಿ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವುದೇ ನೈತಿಕತೆ ಇಲ್ಲ. ಆದ್ದರಿಂದ ಸಂವಿಧಾನದ 356ನೇ ವಿಧಿ ಬಳಸಿ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ರಾಜ್ಯಪಾಲರನ್ನು ಆಗ್ರಹಿಸಿದ್ದಾರೆ.
ಭಾನುವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷೀಯರೇ ಸರ್ಕಾರದ ವಿರುದ್ಧ ಸಿಡಿದೇಳಿರುವುದು ಸರ್ಕಾರದ ಆಡಳಿತ ವೈಫಲ್ಯ ತೋರಿಸುತ್ತದೆ. ಇಂತಹ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಲು ನೈತಿಕತೆಯನ್ನೇ ಕಳೆದುಕೊಂಡಿದೆ. ರಾಜ್ಯದಲ್ಲಿ ಸರಣಿ ಹತ್ಯೆಬಗ್ಗೆ ಮುಂಚಿತವಾಗಿ ಮಾಹಿತಿ ನೀಡುವಲ್ಲಿ ಗುಪ್ತಚರ ಇಲಾಖೆ ವಿಫಲವಾಗಿದೆ. ಗೃಹ ಸಚಿವರ ಮನೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಿದರೂ ಪೊಲೀಸರಿಗೆ ಗೊತ್ತೇ ಆಗುವುದಿಲ್ಲ ಎಂದರು.
ಪ್ರಕರಣವನ್ನು ಎನ್‌ಐಎಗೆ ವಹಿಸಿರುವುದು ರಾಜ್ಯ ಸರ್ಕಾರಕ್ಕೆ ತನಿಖೆ ನಡೆಸಲು ಸಾಧ್ಯವಿಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಹಿಂದೆ ಕಾಂಗ್ರೆಸ್ ಅವಧಿಯಲ್ಲಿ 24 ಕೊಲೆಗಳು ನಡೆದಿದೆ ಅಂಕಿ ಅಂಶ ಸಹಿತ ಆರೋಪಿಸುತ್ತಿರುವ ಬಿಜೆಪಿ ಆಡಳಿತದಲ್ಲೇ ಇದೀಗ ಸರಣಿ ಹತ್ಯೆಗಳು ನಡೆಯುತ್ತಿವೆ. ಕೆಲವು ನಾಯಕರು ಪ್ರಚೋದನಾಕಾರಿಯಾಗಿ ಮಾತನಾಡುತ್ತಿದ್ದು, ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಉತ್ತರ ಪ್ರದೇಶ ಮಾದರಿ ತಂದು ರಾಜ್ಯವನ್ನು ಅಭಿವೃದ್ಧಿಯಲ್ಲಿ ಕೊನೇ ಸ್ಥಾನಕ್ಕೆ ತಳ್ಳುವ ಉದ್ದೇಶ ಬಿಜೆಪಿ ಹೊಂದಿದೆ ಎಂದು ಆರೋಪಿಸಿದರು.
ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಶಾಸಕ ಮೊಯ್ದಿನ್ ಬಾವಾ ಮೊದಲಾದವರಿದ್ದರು.