ಹನೂರು: ಈ ವರ್ಷ ಗಣರಾಜ್ಯೋತ್ಸವ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ಪ್ರಚಾರ ಕೈಗೊಳ್ಳುವುದರ ಮೂಲಕ ಶಿಬಿರ ಯಶಸ್ವಿಗೊಳಿಸುವಂತೆ ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.
ಪಟ್ಟಣದ ಲೋಕೋಪಯೋಗಿ ಅತಿಥಿಗೃಹದ ಸಭಾಂಗಣದಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಆಚರಣೆ ಸಂಬಂಧ ಅಗತ್ಯ ಸಿದ್ಧತೆ ಕುರಿತು ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.
ತಾಲೂಕಿನಲ್ಲಿ ಆಚರಿಸುವ ರಾಷ್ಟ್ರೀಯ ಹಬ್ಬಗಳು ಹಾಗೂ ಮಹಾನ್ ನಾಯಕರ ಜಯಂತಿಗಳು ನೆನಪಿನಲ್ಲಿ ಉಳಿಯಬೇಕಾದರೆ ಮುಂದಿನ ಪೀಳಿಗೆಗೆ ಸ್ಫೂರ್ತಿದಾಯಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ದಿಸೆಯಲ್ಲಿ ಈ ಬಾರಿ ಗಣರಾಜ್ಯೋತ್ಸವ ದಿನದಂದು ರಕ್ತದಾನ ಶಿಬಿರ ಆಯೋಜಿಸಲು ನಿರ್ಧರಿಸಲಾಗಿದ್ದು, ಪ್ರತಿಯೊಬ್ಬರೂ ಅಗತ್ಯ ಮುತುವರ್ಜಿ ವಹಿಸಬೇಕು. ಈ ಬಗ್ಗೆ ಪ್ರಚಾರ ಪಡಿಸುವುದರ ಮೂಲಕ ಹೆಚ್ಚಿನ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನದಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆಯಾಗಬೇಕು. ಎಂದು ತಿಳಿಸಿದರು.
ಅಗತ್ಯ ಸಿದ್ಧತೆ ಕೈಗೊಳ್ಳಿ: ಗಣರಾಜ್ಯೋತ್ಸವ ಕಾರ್ಯಕ್ರಮವು ಯಾವುದೇ ಲೋಪವಾಗದಂತೆ ಅರ್ಥಪೂರ್ಣವಾಗಿ ಆಯೋಜಿಸುವುದರ ಮೂಲಕ ಯಶಸ್ವಿಗೊಳಿಸಬೇಕು. ಈ ಸಂಬಂಧ ಆಯಾ ಇಲಾಖೆಯ ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಜತೆಗೆ ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷೃ ಸಲ್ಲದು. ಇನ್ನು ಕಾರ್ಯಕ್ರಮಕ್ಕೆ ಆಗಮಿಸುವ ಶಾಲಾ ಮಕ್ಕಳಿಗೆ ಕುಡಿಯುವ ನೀರು, ತಿಂಡಿ, ನೆರಳು ಹಾಗೂ ಇನ್ನಿತರ ಅಗತ್ಯ ಮೂಲಸೌಕರ್ಯವನ್ನು ಒದಗಿಸಬೇಕು. ಇದರಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ವಿದ್ಯುತ್ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ಕ್ರೀಡಾಂಗಣ ಅಭಿವೃದ್ಧಿಗೆ ಯೋಜನೆ ಸಿದ್ಧ: ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣವು ವಿಶಾಲವಾಗಿದ್ದು, ಕ್ರೀಡಾ ಚಟುವಟಿಕೆಗಳಿಗೆ ವರದಾನವಾಗಿದೆ. ಕ್ರೀಡಾಸಕ್ತರಿಗೆ ಅನುಕೂಲವಾಗಿದೆ. ಜತೆಗೆ ರಾಷ್ಟ್ರೀಯ ಹಬ್ಬಗಳನ್ನು ಆಯೋಜಿಸಲು ಉತ್ತಮ ವಾತಾವರಣವಿದೆ. ಆದರೆ, ಇಲ್ಲಿ ಅಗತ್ಯ ಮೂಲಸೌಕರ್ಯವಿಲ್ಲದ ಪರಿಣಾಮ ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ದೆಸೆಯಲ್ಲಿ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಯೋಜನೆಯನ್ನು ರೂಪಿಸಲಾಗಿದ್ದು, ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಕ್ರೀಡಾಂಗಣವು ಅಭಿವೃದ್ಧಿ ಹೊಂದಲಿದ್ದು, ಈ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಶಾಸಕರು ತಿಳಿಸಿದರು.
ಇದೇ ವೇಳೆ ಕಾರ್ಯಕ್ರಮದ ರೂಪುರೇಷಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಚರ್ಚಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ತಾಲೂಕಿನ ಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಂಗವಿಕಲ ವಿದ್ಯಾರ್ಥಿನಿ ಅನುಷಾ, ಹನೂರಿನ ಬಿಎಂಜಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಾಗವೇಣಿ ಹಾಗೂ ಸಾಮಾಜಿಕ ರಂಗದಲ್ಲಿ ಸೇವೆ ಸಲ್ಲಿಸಿದ ಇಬ್ಬರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಪಪಂ ಅಧ್ಯಕ್ಷೆ ಮಮ್ತಾಜ್‌ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, ಸದಸ್ಯ ಸುದೇಶ್, ಮಹೇಶ್, ಮಹೇಶ್‌ನಾಯ್ಕ, ಬಸವರಾಜು, ತಹಸೀಲ್ದಾರ್ ವೈ.ಕೆ ಗುರುಪ್ರಸಾದ್, ತಾ.ಪಂ. ಇಒ ಉಮೇಶ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹಾದೇವ, ತಾಲೂಕು ಪಶು ವೈದ್ಯಾಧಿಕಾರಿ ಡಾ.ಸಿದ್ದರಾಜು, ಅಗ್ನಿಶಾಮಕ ಠಾಣಾಧಿಕಾರಿ ಪ್ರಶಾಂತ್‌ನಾಯಕ್, ಸಮಾಜ ಕಲ್ಯಾಣಾಧಿಕಾರಿ ಕೇಶವಮೂರ್ತಿ, ಸಹಾಯಕ ಕೃಷಿ ನಿರ್ದೇಶಕ ಎಸ್. ರಂಗಸ್ವಾಮಿ, ಸೆಸ್ಕ್ ಎಇ ರಂಗಸ್ವಾಮಿ, ಆರ್‌ಐ ಶೇಷಣ್ಣ, ತಾಲೂಕು ಸಾರ್ವಜನಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಸೋಮಶೇಖರ್, ಕಾರ್ಯದರ್ಶಿ ವಿನೋದ್ ಇತರರು ಇದ್ದರು.