ಜಿಲ್ಲೆ

ಶೀಘ್ರ ಅರಣ್ಯ ಸಚಿವರ ಜತೆ ಸಭೆ

ಸುನಿಲ್ ಪೊನ್ನೇಟಿ

ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರವೇ ಅರಣ್ಯ ಸಚಿವರೊಂದಿಗೆ ಸಭೆ ನಡೆಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಭೋಸರಾಜು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸೋಮವಾರ ವಿರಾಜಪೇಟೆ ತಾಲೂಕು ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆಗೆ ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಬಗ್ಗೆ ಕೊಡಗು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಳ್ಳಲಾಗಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಈ ರೀತಿಯ ಘಟನೆಗಳು ಹೆಚ್ಚಾಗುತ್ತಿವೆ. ಘಟನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಶ್ವತವಾದ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಇದಕ್ಕಾಗಿ ಅರಣ್ಯ ಸಚಿವರೊಂದಿಗೆ ಶೀಘ್ರದಲ್ಲೇ ಸಭೆಯನ್ನು ನಡೆಸಲಾಗುವುದು. ಅರಣ್ಯ ಸಚಿವರೊಂದಿಗೆ ಈ ಬಗ್ಗೆ ಮಾತನಾಡಿದ್ದು ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ. ಘಟನೆಯಲ್ಲಿ ತೊಂದರೆಗೀಡಾದ ಕುಟುಂಬಕ್ಕೆ ಅಗತ್ಯ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.