ಕಲಬುರಗಿ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇರದ ಕಾರಣಕ್ಕೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದ್ದರಿಂದ ಬಾಲಕನೊಬ್ಬ ಅನ್ಯಾಯವಾಗಿ ಸಾವಿಗೀಡಾಗುವಂತಾಗಿದ್ದು, ಸಿಟ್ಟಿಗೆದ್ದ ಸಾರ್ವಜನಿಕರು ಆಸ್ಪತ್ರೆ ಮುಂದೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನೆಲೋಗಿ ನಿವಾಸಿ ಗುರು ಮಂಗಾ (10) ಎಂಬಾತ ಸಾವಿಗೀಡಾದ ಬಾಲಕ. ಗುರು ಇಂದು ಮಧ್ಯಾಹ್ನ ಟ್ರ್ಯಾಕ್ಟರ್ ಮೇಲಿದ್ದ ಬಿದ್ದು ಗಾಯಗೊಂಡಿದ್ದ. ಗಾಯಾಳು ಬಾಲಕನನ್ನು ನೆಲೋಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು.
ಆದರೆ ಆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇರದ್ದರಿಂದ ತಕ್ಷಣಕ್ಕೆ ಚಿಕಿತ್ಸೆ ಸಿಕ್ಕಿರಲಿಲ್ಲ. ಬಳಿಕ ಆತನನ್ನು ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಬಾಲಕ ಮೃತಪಟ್ಟಿದ್ದಾನೆ. ಇದರಿಂದ ಸಿಟ್ಟಾದ ಸಾರ್ವಜನಿಕರು ಆಸ್ಪತ್ರೆಗೆ ಮುಳ್ಳು ಇಟ್ಟು, ಟಯರ್ಗೆ ಬೆಂಕಿ ಹಚ್ಚಿದ್ದಲ್ಲದೆ, ಆಸ್ಪತ್ರೆ ಬಳಿ ನಿಲ್ಲಿಸಿದ್ದ ಆ್ಯಂಬುಲೆನ್ಸ್ಗೆ ಕಲ್ಲೆಸೆದು ಹಾನಿ ಮಾಡಿದ್ದಾರೆ.
ನೆಲೋಗಿ ಜೇವರ್ಗಿ ಶಾಸಕ ಡಾ.ಅಜಯಸಿಂಗ್ ಅವರ ತವರೂರಾಗಿದ್ದು, ಅಲ್ಲೇ ಇಂಥ ಅವ್ಯವಸ್ಥೆ ಉಂಟಾಗಿರುವ ವಿರುದ್ಧ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.