ಜಿಲ್ಲೆ

ಬಿಎಸ್​ ಯಡಿಯೂರಪ್ಪ ಆಪ್ತ, ಅರಸೀಕೆರೆ ಮಾಜಿ ಶಾಸಕ ಎ.ಎಸ್ ಬಸವರಾಜು ನಿಧನ

ಹಾಸನ: ವೀರಶೈವ ಲಿಂಗಾಯತ ಸಮಾಜದ ಮುಖಂಡ ಹಾಗೂ ಮಾಜಿ ಶಾಸಕ ಎ.ಎಸ್.ಬಸವರಾಜು (75) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ನಿಧನರಾಗಿದ್ದಾರೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರಿಗೆ 75 ವರ್ಷ ವಯಸ್ಸಾಗಿತ್ತು.

2004-2007ರವರೆಗೆ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1999 ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ, ಕಾಂಗ್ರೆಸ್‍ನ ಜಿ.ವಿ.ಸಿದ್ದಪ್ಪ ಅವರ ವಿರುದ್ಧ ಸೋಲು ಕಂಡಿದ್ದರು. ಎ.ಎಸ್.ಬಸವರಾಜು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದರು. ಪತ್ನಿ, ಮೂವರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

ಹೊನ್ನವಳ್ಳಿ ಏತ ನಿರಾವರಿ ಅನುಷ್ಠಾನ, ದೇವಿಕಟ್ಟೆ ಒಡ್ಡು, ಸರ್ಕಾರಿ ಪದವಿ, ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಮಂಜೂರು ಮಾಡಿಸಿ ಜನಪ್ರಿಯತೆ ಪಡೆದಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ ಸೇರಿದಂತೆ ಹಲವರು ಜತೆ ನಿಕಟ ಬಾಂಧವ್ಯ ಹೊಂದಿದ್ದರು.ಶುಕ್ರವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.