ಜಿಲ್ಲೆ

ಮಾ.2ರಿಂದ ಬೂದನೂರು ಉತ್ಸವ: ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿಕೆ

ಕೆ.ಎನ್.ರಾಘವೇಂದ್ರ

ಮಂಡ್ಯ: ತಾಲೂಕಿನಲ್ಲಿ ಬೂದನೂರು ಗ್ರಾಮದಲ್ಲಿ ಉತ್ಸವವನ್ನು ಮಾ.2 ಹಾಗೂ 3ರಂದು ಹಮ್ಮಿಕೊಳ್ಳಲಾಗುವುದು. ಇದಕ್ಕೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉತ್ಸವವನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ವೇದಿಕೆ, ಆಹಾರ, ಸ್ವಾಗತ, ಸೇರಿದಂತೆ ವಿವಿಧ ಸಮಿತಿ ರಚಿಸಲಾಗಿದೆ. ಕಾರ್ಯಕ್ರಮಗಳು ಉತ್ತಮವಾಗಿ ಸಂಘಟಿಸಲು ಕಾರ್ಯ ಪ್ರವೃತ್ತರಾಗಬೇಕು ಎಂದರು.

ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆ ಕೆಲಸಗಳು ಪ್ರಾರಂಭವಾಗಬೇಕು. ಸಣ್ಣಪುಟ್ಟ ರಸ್ತೆ ದುರಸ್ತಿ ಕೆಲಸಗಳಿದ್ದಲ್ಲಿ ಅವುಗಳನ್ನು ಶೀಘ್ರವಾಗಿ ಪ್ರಾರಂಭಿಸಿ ಪೂರ್ಣಗೊಳಿಸಬೇಕು. ವಾಹನಗಳ ನಿಲುಗಡೆ ಪ್ರದೇಶವನ್ನು ಸಮತಟ್ಟು ಮಾಡುವುದರ ಜತೆಗೆ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಿ. ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಅವಶ್ಯಕತೆ ಇರುವ ಪ್ರದೇಶಗಳಲ್ಲಿ ಸಿ.ಸಿ ಕ್ಯಾಮೆರಾ ವ್ಯವಸ್ಥೆ ಮಾಡಿಕೊಳ್ಳಿ ಎಂದರು.

ಇದೇ ಮೊದಲ ಬಾರಿಗೆ ಗ್ರಾಮ ಮಟ್ಟದಲ್ಲಿ ಉತ್ಸವ ಆಯೋಜನೆ ಮಾಡಲಾಗುತ್ತಿದೆ. ಆದ್ದರಿಂದ ಎಲ್ಲಿಯೂ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಜನರಿಗೆ ಅನುಕೂಲವಾಗುವಂತೆ ಕುಡಿಯುವ ನೀರು ಹಾಗೂ ತಾತ್ಕಾಲಿಕ ಶೌಚಗೃಹದ ವ್ಯವಸ್ಥೆ ಮಾಡಬೇಕು. ಎಲ್ಲ ಜಿಲ್ಲೆಗಳ ವಿಶೇಷತೆಯುಳ್ಳ ವಿವಿಧ ಆಹಾರ ಖಾದ್ಯ ತಯಾರಿಸುವ ಆಹಾರ ಮೇಳವನ್ನು ಆಯೋಜಿಸಬೇಕು. ಈ ಮಳಿಗೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸ್ಿ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಇತರರಿದ್ದರು.