ಹನೂರಿನಲ್ಲಿ ಆಯೋಜಿಸಿದ್ದ ಪ್ರಾಥಮಿಕ ಶಾಲಾ ಮಕ್ಕಳ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿ ಗಣ್ಯರಿಗೆ ಗೌರವ ವಂದನೆ ಸಲ್ಲಿಸಿದರು. ಗುರುಲಿಂಗಯ್ಯ, ಅಶೋಕ್, ಗುರುಸ್ವಾಮಿ, ಕೃಷ್ಣೇಗೌಡ ಇತರರು ಇದ್ದರು. 
ಜಿಲ್ಲೆ

ಕ್ರೀಡೆಯಿಂದ ಆತ್ಮವಿಶ್ವಾಸ ವೃದ್ಧಿ

ಲೋಕೇಶ್ ಮನು. ಡಿ

ಹನೂರು: ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಕ್ರಿಯಾಶೀಲತೆಯಿಂದ ಭಾಗವಹಿಸುವ ಜತೆಗೆ ಜಯ ಗಳಿಸುವ ಆತ್ಮವಿಶ್ವಾಸ ಹೊಂದಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ತಿಳಿಸಿದರು.

ಪಟ್ಟಣದ ಶ್ರೀ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ 14 ರಿಂದ 17 ವರ್ಷದೊಳಗಿನ ಪ್ರಾಥಮಿಕ ಶಾಲಾ ಮಕ್ಕಳ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಆದರೆ ಕೆಲ ಮಕ್ಕಳು ಕೀಳರಿಮೆಯಿಂದ ಕ್ರೀಡೆಯಲ್ಲಿ ಭಾಗವಹಿಸುವುದಿಲ್ಲ. ಈ ಭಾವನೆ ದೂರವಾಗಬೇಕು. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸುವಂತಾಗಬೇಕು. ತಾಲೂಕು, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು. ಈ ಮೂಲಕ ಶಾಲೆ ಹಾಗೂ ಶೈಕ್ಷಣಿಕ ವಲಯಕ್ಕೆ ಕೀರ್ತಿ ತರಬೇಕು ಎಂದರು.

ದೈಹಿಕ ಶಿಕ್ಷಣ ಶಿಕ್ಷಕರು ಮಕ್ಕಳಿಗೆ ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ನೀಡಬೇಕು. ಇನ್ನು ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿ. ಇದರಿಂದ ಆರೋಗ್ಯವು ವೃದ್ಧಿಸುತ್ತದೆ. ಜತೆಗೆ ಸ್ಪರ್ಧಾತ್ಮಕ ಭಾವ ಬೆಳೆಸುತ್ತದೆ. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಇದಕ್ಕೂ ಮುನ್ನ ವಿವಿಧ ಶಾಲೆಗಳಿಂದ ಆಗಮಿಸಿದ ಮಕ್ಕಳು ಆಕರ್ಷಕ ಪಥಸಂಚಲನ ನಡೆಸಿ ಗಣ್ಯರಿಗೆ ಗೌರವ ವಂದನೆ ಸಲ್ಲಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕರಿಂದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಶಿಕ್ಷಣ ಸಂಯೋಜಕ ಅಶೋಕ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕೆಂಪರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಲಿಂಗಂ, ಸಿಆರ್‌ಪಿಗಳಾದ ಚಿನ್ನಪ್ಪಯ್ಯ, ಮಹೇಶ್, ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಇತರರು ಇದ್ದರು.