ಚಿಕ್ಕಬಳ್ಳಾಪುರ: ತಾಲೂಕಿನ ಹುನೇಗಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಮತ್ತು ಗ್ರಾನೈಟ್ ಕಲ್ಲು ಸಾಗಿಸುತ್ತಿದ್ದ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ವಾಹನಗಳು ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡು, ಕೆಲಕಾಲ ಆತಂಕ ಸೃಷ್ಟಿಸಿತ್ತು.
ಕ್ಯಾಂಟರ್ ಚಾಲಕ ನರಸಿಂಹಮೂರ್ತಿ(42) ಹಾಗೂ ಮಾದಪ್ಪ(44) ಗಾಯಾಳುಗಳು. ಇಬ್ಬರಿಗೂ ತೀವ್ರ ಸುಟ್ಟ ಗಾಯಗಳಾಗಿರುವುದರಿಂದ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಧಿಕವಾಗಿದ್ದು, ಇದರ ನಡುವೆ ಸಿಲಿಂಡರ್ ಸಾಗಿಸುತ್ತಿದ್ದ ಅಪಘಾತಕ್ಕೆ ತುತ್ತಾಗಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಎರಡು ವಾಹನಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಪೊಲೀಸರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿದ್ದಾರೆ. ಹಾಗೆಯೇ ಕ್ರೇನ್ ಮೂಲಕ ಹಾನಿಗೊಳಗಾದ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.
ವಾಹನ ತಿರುವು ಪಡೆಯುವಾಗ ಅಪಘಾತ
ಹುನೇಗಲ್ ಬಳಿ ಯು-ಟರ್ನ್ ಪಡೆಯುವ ವೇಳೆ ಸಿಎನ್‌ಜಿ ಸಿಲಿಂಡರ್ ತುಂಬಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸಿಎನ್‌ಜಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಇದರ ಪರಿಣಾಮ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.