ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಆಲೂರಿನಲ್ಲಿ ವಿವಿಧ ರಾಜಕೀಯ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು. 
ಜಿಲ್ಲೆ

ಬಸ್ ಸಂಚಾರ ಸಂಪೂರ್ಣ ವಿರಳ

ರವಿಕುಮಾರ್ ಪಿ. ಕೆ

ಆಲೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಆಲೂರು ತಾಲೂಕಿನ ಬಿಜೆಪಿ, ಜೆಡಿಎಸ್, ಕರವೇ ಪ್ರವೀಣ್ ಶೆಟ್ಟಿ ಬಣ, ಜಯಕರ್ನಾಟಕ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.
ಪಟ್ಟಣದ ಕೊನೇ ಪೇಟೆಯಿಂದ ಕೆಇಬಿ ಸರ್ಕಲ್‌ವರೆಗೂ ಕಾಲ್ನಡಿಗೆ ಜಾಥಾ ನಡೆಸಿ ಕಾವೇರಿ ಪ್ರಾಧಿಕಾರದ ವಿರುದ್ಧ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ತಾಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಪ್ರತಿಭಟನಾ ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಪಟ್ಟಣದಲ್ಲಿರುವ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ಮದ್ಯಾಹ್ನ 12 ಗಂಟೆ ನಂತರ ಕರ್ನಾಟಕ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಕೆನರಾ ಬ್ಯಾಂಕುಗಳು ಮುಚ್ಚಿದ್ದವು. ಎಸ್‌ಬಿಐ ಬ್ಯಾಂಕ್ ಮತ್ತು ಸರ್ಕಾರಿ ಕಚೇರಿಗಳು ಮತ್ತು ತರಕಾರಿ ಮಾರುಕಟ್ಟೆ ಎಂದಿನಂತೆ ಕಾರ್ಯನಿರ್ವಹಿಸಿದವು. ಬಸ್ ಸಂಚಾರ ಸಂಪೂರ್ಣ ವಿರಳವಾಗಿತ್ತು.