ಜಿಲ್ಲೆ

ಬಾಕಿ ಸಹಾಯಧನ ಬಿಡುಗಡೆಗೆ ಬಿವೈಆರ್ ಮನವಿ

ಶಿವಮೊಗ್ಗ: ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಬುಧವಾರ ದೆಹಲಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ಸಂಗತಿಗಳ ಬಗ್ಗೆ ಚರ್ಚಿಸಿದ್ದಾರೆ. ಮುಖ್ಯವಾಗಿ ಅಡಕೆ ಬೆಳೆಗಾರರು ಕೃಷಿ ಸಂಸ್ಕರಣಾ ಘಟಕಕ್ಕೆ ಶೇ.50ರಷ್ಟು ಸಹಾಯಧನವನ್ನು ಈಗಾಗಲೇ ಪಡೆದಿದ್ದಾರೆ. ಉಳಿದ ಶೇ.50 ಸಹಾಯಧನವನ್ನು ನಬಾರ್ಡ್ ಮೂಲಕ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ಆದಿ ಶಂಕರಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕೊಲ್ಲೂರು ಮೂಕಾಂಬಿಕಾ ದೇವಾಲಯವು ದಕ್ಷಿಣ ಭಾರತದ ಆಧ್ಯಾತ್ಮಿಕ ಕ್ಷೇತ್ರದ ಮೂಲಾಧಾರ. ಧಾರ್ಮಿಕ ಮಹತ್ವದ ಜತೆಗೆ ಅನೇಕ ಪ್ರವಾಸಿ ತಾಣಗಳು 50 ಕಿ.ಮೀ ವ್ಯಾಪ್ತಿಯಲ್ಲಿವೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವನ್ನು ಪ್ರಸಾದ್ ಯೋಜನೆಯಡಿ ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೋರಿರುವುದಾಗಿ ಬಿವೈಆರ್ ಹೇಳಿಕೆ ನೀಡಿದ್ದಾರೆ. ಮನವಿಗೆ ಕೇಂದ್ರ ಸಚಿವರು ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗಕ್ಕೆ ಸಿಜಿಎಚ್‌ಎಸ್

ಕೇಂದ್ರ ಸರ್ಕಾರಿ ನೌಕರರು, ನಿವೃತ್ತ ನೌಕರರು ಮತ್ತು ಅವರ ಕುಟುಂಬ ಸದಸ್ಯರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯ (ಸಿಜಿಎಚ್‌ಎಸ್) ಕ್ಷೇಮ ಕೇಂದ್ರವನ್ನು ಶಿವಮೊಗ್ಗದಲ್ಲಿ ಆರಂಭಿಸಬೇಕೆಂದು ಕೇಂದ್ರ ಸರ್ಕಾರದ ಮೇಲೆ ಸಾಕಷ್ಟು ಒತ್ತಡ ಹೇರಿದ್ದೆ. ಈಗ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕ್ಷೇಮ ಕೇಂದ್ರಗಳ ಸ್ಥಾಪನೆಗೆ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ಕೇಂದ್ರ ತೆರೆಯಲು ಅಗತ್ಯ ಹುದ್ದೆಗಳ ಮಂಜೂರಾತಿ ಮಾಡುವ ಜತೆಗೆ ಅನುದಾನ ಬಿಡುಗಡೆ ಮಾಡಬೇಕೆಂದು ವಿತ್ತ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.