ಶಿವಮೊಗ್ಗ: ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸಮರ್ಪಕವಾಗಿ ರಸಗೊಬ್ಬರ ಹಂಚಿಕೆ ಮಾಡಿತ್ತು. ಆದರೆ ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ ಇಂದು ರಸಗೊಬ್ಬರ ಕೊರತೆ ಎದುರಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ರೈತರ ಮತಗಳಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ನವರು ರೈತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯಿಲ್ಲ. ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎಂಬುದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ರೈತರ ಬಗ್ಗೆ ಸಿಎಂಗೆ ದ್ವೇಷ ಹಾಗೂ ತಾತ್ಸಾರವೇಕೆ ಎಂದು ಪ್ರಶ್ನಿಸಿದ ಬಿವೈವಿ ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ರಾಜ್ಯದ 4,283 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಕಳೆದ ಎರಡೂವರೆ ವರ್ಷದಲ್ಲಿ 980 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರ 8.23 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆ ಮಾಡಿತ್ತು. 2.53 ಲಕ್ಷ ಟನ್ ರಸಗೊಬ್ಬರ ದಾಸ್ತಾನಿದೆ ಎಂದು ಸಿಎಂ ಹೇಳಿದ್ದರು. ದಾಸ್ತಾನಿದ್ದ ಗೊಬ್ಬರ ಏನಾಯಿತು? ಎಂದು ತಿರುಗೇಟು ನೀಡಿದರು.
ದುರ್ದೈವ ಎಂದರೆ ರಾಜ್ಯದ ಕೃಷಿ ಸಚಿವರು ಯಾರು ಎಂಬುದೇ ರೈತರಿಗೆ ಗೊತ್ತಿಲ್ಲ. ತಿಂಗಳಲ್ಲಿ 3-4 ಬಾರಿ ದೆಹಲಿಗೆ ಹೋಗಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮನೆಯ ಗೇಟು ಕಾಯುವ ಸಿಎಂ ಸಿದ್ದರಾಮಯ್ಯ ಅವರಿಗೆ ರೈತರ ಬಗ್ಗೆ ಕಾಳಜಿಯಿಲ್ಲ ಎಂದು ಟೀಕಿಸಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಮಾಜಿ ಸಚಿವ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಡಿ.ಎಸ್.ಅರುಣ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.