ಜಿಲ್ಲೆ

ವೈದ್ಯಕೀಯ ಕಾಲೇಜುಗಳ ಜತೆ ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಕೇರ್ ಆರಂಭ

ಶಿವಮೊಗ್ಗ: ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವೈದ್ಯಕೀಯ ಕಾಲೇಜುಗಳ ಜತೆ ಜತೆಗೇ ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಕೇರ್, ಕಾರ್ಡಿಯಾಲಜಿ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆರಂಭಿಸುವ ಗುರಿ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.

ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ(ಐಎಲ್‌ಯುಎಫ್) ನಗರದಲ್ಲಿ ಶನಿವಾರ ಏರ್ಪಡಿಸಿದ್ದ ವಿವಿಧ ರಾಜ್ಯಗಳ ವೈದ್ಯರು, ವೈದ್ಯಕೀಯ ಕ್ಷೇತಕ್ಕೆ ಸಂಬಂಧಿಸಿದ ವಿವಿಧ ಉದ್ಯಮಗಳಲ್ಲಿ ತೊಡಗಿಸಿಕೊಂಡವರು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ 24 ವೈದ್ಯಕೀಯ ಕಾಲೇಜುಗಳಿದ್ದು ಕಡಿಮೆ ವೆಚ್ಚದಲ್ಲಿ ಎಲ್ಲ ರೋಗಿಗಳಿಗೂ ಚಿಕಿತ್ಸೆ ಸಿಗುವಂತೆ ಮಾಡುವುದು ರಾಜ್ಯ ಸರ್ಕಾರದ ಉದ್ದೇಶ ಎಂದರು.

ಹೃದಯ ಸಂಬಂಧಿ ಕಾಯಿಲೆಗಳಿಗೆ ಈಗಾಗಲೇ ಬೆಂಗಳೂರು, ಮೈಸೂರು, ಕಲಬುರಗಿ, ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಮಾದರಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಸ್ಪತ್ರೆಗಳ ಹೊರತಾಗಿ ಪ್ರತಿ ಜಿಲ್ಲೆಯಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ತೆರೆಯಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲೇ ಗುಣಮಟ್ಟದ ಚಿಕಿತ್ಸೆ ಸಿಗುವಂತೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದರು.

ಏಕಗವಾಕ್ಷಿಯಡಿ ಆಸ್ಪತ್ರೆ ಪರವಾನಗಿ

ಒಂದು ಆಸ್ಪತ್ರೆ ಆರಂಭಿಸಲು 55 ರೀತಿಯ ಪರವಾನಗಿ ಪಡೆದುಕೊಳ್ಳುವ ಅನಿವಾರ್ಯತೆ ಇರುವುದು ಗಮನಕ್ಕೆ ಇರಲಿಲ್ಲ. ಆರೋಗ್ಯ ಸಚಿವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿ ಶೀಘ್ರ ಏಕಗವಾಕ್ಷಿ ಅಡಿ ಪರವಾನಗಿ ಪಡೆದುಕೊಳ್ಳುವ ವ್ಯವಸ್ಥೆ ಮಾಡುವುದಾಗಿ ಸಚಿವರು ಭರವಸೆ ನೀಡಿದರು. ನಮ್ಮ ಸರ್ಕಾರ ಯೋಜನೆಗಳ ಸರಳೀಕರಣಕ್ಕೆ ಒತ್ತು ನೀಡುತ್ತಿದೆ. ವೈದ್ಯ ವೃತ್ತಿಯಲ್ಲಿ ಅಡ್ಡಮಾರ್ಗಗಳು ಹೆಚ್ಚು. ವೈದ್ಯರು ಎಲ್ಲಿ ದಾರಿ ತಪ್ಪುತ್ತಿದ್ದಾರೆ ಎಂಬುದನ್ನು ಸರಿಪಡಿಸಲು ಸರ್ಕಾರ ಗಂಭೀರವಾಗಿ ಚಿಂತನೆ ಮಾಡಲಿದೆ ಎಂದರು.