ಪುತ್ತೂರು ಗ್ರಾಮಾಂತರ : ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಜಂಕ್ಷನ್ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಭಾನುವಾರ ಸಂಭವಿಸಿದೆ.
ಕಾರಿನ ಮುಂಭಾಗ ಸಂಪೂರ್ಣವಾಗಿ ಹಾನಿಗೊಂಡಿದ್ದರೂ ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಹೋಗಿ ಮರಳಿ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಕುಂಬ್ರ ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ಕಳಕೊಂಡು ಹೆದ್ದಾರಿ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನ ಮುಂಭಾಗ ಸಂಪೂರ್ಣವಾಗಿ ಹಾನಿಗೊಂಡಿದೆ. ಕಾರಿನಲ್ಲಿ ಇಬ್ಬರು ಮಕ್ಕಳ ಸಹಿತ ಆರು ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಮಹಿಳೆಯೊಬ್ಬರ ಮುಖಕ್ಕೆ ಗಾಯಗಳಾಗಿದ್ದು, ಉಳಿದ ಮಂದಿ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.