ಜಿಲ್ಲೆ

ಕರೊನಾ ಲಸಿಕೆಯಿಂದ ಅಡ್ಡಪರಿಣಾಮವಿಲ್ಲ ; ಕೋವಿಡ್-19 ಲಸಿಕಾ ಉತ್ಸವಕ್ಕೆ ಚಾಲನೆ

Tumakuru

ತುಮಕೂರು: 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕರೊನಾ ಲಸಿಕೆ ತೆಗೆದುಕೊಳ್ಳಬೇಕು. ಲಸಿಕೆ ಪಡೆಯುವುದರಿಂದ ಯಾವುದೇ ದುಷ್ಪರಿಣಾಮ ಇಲ್ಲ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಭಾನುವಾರದಿಂದ ಏ.14ರವರೆಗೆ ಹಮ್ಮಿಕೊಳ್ಳಲಾಗಿರುವ ಕೋವಿಡ್-19 ಲಸಿಕಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಮಂತ್ರಿ ಸೇರಿ ಎಲ್ಲ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಲಸಿಕೆ ಪಡೆದುಕೊಂಡಿದ್ದಾರೆ. ಇದರಿಂದ ಯಾವುದೇ ರೀತಿಯ ಅಡ್ಡಪರಿಣಾಮ ಇಲ್ಲ. ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶಾದ್ಯಂತ ಏ.11 ರಿಂದ 14ರ ವರೆಗೆ ಲಸಿಕಾ ಉತ್ಸವ ನಡೆಸಲು ನಿರ್ದೇಶನ ನೀಡಿದ್ದಾರೆ. ಅದರಂತೆ ರಾಜ್ಯದಲ್ಲೂ ಲಸಿಕಾ ಉತ್ಸವವನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಗುತ್ತಿದ್ದು, ಇದರ ಭಾಗವಾಗಿ ಜಿಲ್ಲಾಸ್ಪತ್ರೆಯಲ್ಲಿ ಕರೊನಾ ಲಸಿಕಾ ಕೇಂದ್ರ ಉದ್ಘಾಟಿಸಲಾಗಿದೆ ಎಂದರು.

ಮೊದಲನೇ ಡೋಸ್ ಮತ್ತು 2ನೇ ಡೋಸ್ ಎರಡನ್ನು ಪಡೆಯುವುದರಿಂದ ಜನರಲ್ಲಿ ಇದರ ಬಗ್ಗೆ ವಿಶ್ವಾಸ ಮೂಡಿ ಕೋವಿಡ್-19 ತಡೆಯುವ ನಿಟ್ಟಿನಲ್ಲಿ ಯಶಸ್ವಿಯಾಗಬಹುದು. 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಯಾವುದೇ ರೀತಿಯ ಭಯ ಪಡದೆ ಲಸಿಕಾ ಕೇಂದ್ರಗಳಿಗೆ ಬಂದು ಮುಂಜಾಗ್ರತಾ ಕ್ರಮವಾಗಿ ಕೋವಿಡ್-19 ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಇದಾದ ಬಳಿಕ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಲಸಿಕೆ ಪಡೆಯಲು ಬಂದಿದ್ದವರ ಆಧಾರ್ ಕಾರ್ಡ್ ನಮೂದನೆ ಸೇರಿ ಎಲ್ಲ ದಾಖಲಾತಿಗಳನ್ನು ಪರಿಶೀಲಿಸಿ, ವೈದ್ಯರಿಂದ ಮಾಹಿತಿ ಪಡೆದು ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು.

ಪಾಲಿಕೆ ಆಯುಕ್ತೆ ರೇಣುಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಟರಾಜು, ಡಾ.ಕೇಶವರಾಜು, ಡಾ.ಸನತ್‌ಕುಮಾರ್, ಡಾ.ಮೋಹನ್‌ದಾಸ್, ತಾಲೂಕು ಆರೋಗ್ಯಾಧಿಕಾರಿ ಡಾ. ಮೋಹನ್, ಡಾ.ಹಂಸ ಮತ್ತಿತರರು ಉಪಸ್ಥಿತರಿದ್ದರು.

ಕರೊನಾ ಲಸಿಕಾ ಉತ್ಸವವನ್ನು ಅತ್ಯಂತ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗಬೇಕು. ಲಸಿಕೆ ಪಡೆಯುವ ಸಂಬಂಧ ಸಾರ್ವಜನಿಕರಲ್ಲಿ ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರ ಮೂಲಕ ಅರಿವು ಮೂಡಿಸಬೇಕು. 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಭಯಪಡುವ ಅಗತ್ಯವಿಲ್ಲ. ವೈ.ಎಸ್.ಪಾಟೀಲ ಜಿಲ್ಲಾಧಿಕಾರಿ