ಜಿಲ್ಲೆ

ಮಕ್ಕಳ ರಕ್ಷಣೆಗೆ ನಿರಂತರ ತಪಾಸಣೆ ನಡೆಸಿ

ವಿಜಯವಾಣಿ ಸುದ್ದಿಜಾಲ ಧಾರವಾಡ
ಬಾಲ ಕಾರ್ಮಿಕ, ಬಾಲ್ಯವಿವಾಹ, ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆದು, ಮಕ್ಕಳನ್ನು ರಕ್ಷಿಸಲು ತಹಸೀಲ್ದಾರ ನೇತೃತ್ವದ ತಾಲೂಕು ಮಟ್ಟದ ಅಧಿಕಾರಿಗಳ ತಂಡ ನಿರಂತರ ತಪಾಸಣೆ ಕೈಗೊಳ್ಳಬೇಕು ಎಂದು ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.
ನಗರದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಮಕ್ಕಳಿಗೆ ಸಂವಿಧಾನಾತ್ಮಕವಾಗಿ ಸಿಗುವ ಹಕ್ಕು ದೊರೆಯುವಂತೆ ಮಾಡುವುದು ಎಲ್ಲರ ಕರ್ತವ್ಯ. ಮಕ್ಕಳ ಪ್ರಯಾಣಕ್ಕೆ ಸುರಕ್ಷಿತ ಸಾರಿಗೆ, ಶಾಲೆ, ವಸತಿ ನಿಲಯಗಳಲ್ಲಿ ಉತ್ತಮ ಕುಡಿಯುವ ನೀರು, ಶೌಚಗೃಹ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಪೋಕ್ಸೊ, ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ಸಮಾಜದಲ್ಲಿ ಹೆಚ್ಚು ಅರಿವು ಮೂಡಿಸಬೇಕು. ಶಾಲಾ ಮಕ್ಕಳಲ್ಲಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ದೌರ್ಜನ್ಯ ಪ್ರಕರಣಗಳ ಕುರಿತು ಮಾಹಿತಿ ದೊರೆತ ತಕ್ಷಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಕ್ರಮಕೈಗೊಳ್ಳಬೇಕು ಎಂದರು.
ತಮ್ಮ ಕರ್ತವ್ಯದ ನಿರ್ಲಕ್ಷೃದಿಂದ ಮಕ್ಕಳಿಗೆ ಹಾನಿ ಆಗದಂತೆ ಜವಾಬ್ದಾರಿಯಿಂದ ಅಧಿಕಾರಿಗಳು ಕೆಲಸ ಮಾಡಬೇಕು. ವಿಶೇಷವಾಗಿ ಶಿಥಿಲವಾದ ಶಾಲಾ ಕಟ್ಟಡಗಳ, ವಸತಿ ಶಾಲೆ ಕಟ್ಟಡಗಳ ಬಗ್ಗೆ ಪರಿಶೀಲಿಸಬೇಕು. ದುರಸ್ತಿ ಇದ್ದರೆ ತಕ್ಷಣ ಮಾಡಿಸಬೇಕು ಎಂದರು.
ಬಾಲ್ಯ ವಿವಾಹಗಳ ಬಗ್ಗೆ ಎಚ್ಚರ ವಹಿಸಬೇಕು. ಸಾಮೂಹಿಕ ವಿವಾಹಗಳ ಅನುಮತಿಸುವಾಗ ನೋಂದಾಯಿತರ ದಾಖಲಾತಿಗಳ ಸಮಗ್ರ ಪರಿಶೀಲನೆ ಆಗಬೇಕು. ಪಾಲಕರಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸಬೇಕು. ಪ್ರತಿ ಗ್ರಾಪಂಗಳಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆ ತಪ್ಪದೆ ಆಯೋಜಿಸಬೇಕು ಎಂದರು.
ತಹಸೀಲ್ದಾರ ದೊಡ್ಡಪ್ಪ ಹೂಗಾರ, ತಾಪಂ ಇಒ ಗಂಗಾಧರ ಕಂದಕೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀತಾ ವಾಡಕರ, ತಾಲೂಕು ಆರೋಗ್ಯಾಧಿಕಾರಿ ಡಾ. ಕೆ.ಎನ್.ತನುಜಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಹಿಂದುಳಿದ ವರ್ಗಗಳ, ಸಮಾಜ ಕಲ್ಯಾಣ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.