ಮೈಸೂರು: ಕಾವೇರಿ ನದಿ ನೀರು ಉಳಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ, ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ, ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಗುರುವಾರ ಪ್ರತ್ಯೇಕ ಪ್ರತಿಭಟನೆ ನಡೆಯಿತು.
ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಕಾಡಾ ಕಚೇರಿ ಮುಂಭಾಗ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿಯಲು ಯತ್ನಿಸಿದ ರೈತರನ್ನು ಕಾಡಾ ಕಚೇರಿ ಆವರಣದಲ್ಲಿಯೇ ಪೊಲೀಸರು ತಡೆದರು.
ತಮಿಳುನಾಡಿನಲ್ಲಿ ಒಂದೇ ಒಂದು ನದಿ ಹುಟ್ಟಿ ಹರಿಯುವುದಿಲ್ಲ. ಹೊರ ರಾಜ್ಯಗಳ ನದಿಗಳನ್ನೇ ಆಶ್ರಯಿಸಿ ತಮಿಳುನಾಡು ರೈತರು ಎರಡರಿಂದ ಮೂರು ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಆದರೆ, ಕಾವೇರಿ ನದಿ ನಮ್ಮಲ್ಲೇ ಹುಟ್ಟಿ ಹರಿದರೂ ನಮಗೆ ಒಂದು ಬೆಳೆ ಬೆಳೆಯಲು ಸಹ ನೀರು ದೊರೆಯುತ್ತಿಲ್ಲ. ರಾಜ್ಯದ ರೈತರ ಹಿತವನ್ನು ಕಾಪಾಡಲು ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ವಿಫಲವಾಗಿದ್ದಾರೆ. ಇನ್ನಾದರೂ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಸಂಘದ ರಾಜ್ಯ ಮಾಧ್ಯಮ ಕಾರ್ಯದರ್ಶಿ ಮಂಜು ಕಿರಣ್ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾದ ವಿದ್ಯಾಸಾಗರ್ ಟಿ. ರಾಮೇಗೌಡ, ಬಂಗಾರಸ್ವಾಮಿ, ಅಹಲ್ಯ ನಾಗರಾಜ್, ನಂಜುಂಡೇಗೌಡ, ಸತೀಶ್‌ರಾವ್ ಹಾಗೂ ಇತರರು ಪಾಲ್ಗೊಂಡಿದ್ದರು.
ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ನಗರದ ನ್ಯಾಯಾಲಯ ಮುಂಭಾಗದ ಗಾಂಧಿ ಪ್ರತಿಮೆ ಎದುರು ಕಣ್ಣಿಗೆ ಬಟ್ಟೆಕಟ್ಟಿ ತಮಿಳು ನಾಡಿಗೆ ನೀರು ಹರಿಸುತ್ತಿರುವ ಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದರು.
ಪ್ರತಿನಿತ್ಯ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿರುವುದು ಅವೈಜ್ಞಾನಿಕವಾಗಿದೆ. ಈ ರೀತಿ ಆದೇಶ ಹೊರಡಿಸುವ ಮುನ್ನ ರಾಜ್ಯದ ವಾಸ್ತವ ಸ್ಥಿತಿ ಅರಿಯುವ ಪ್ರಯತ್ನ ಮಾಡಬೇಕಾಗಿತ್ತು. ರಾಜ್ಯದಲ್ಲಿ ತೀವ್ರ ಮಳೆಯ ಕೊರತೆಯಿಂದ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗುವ ಹಂತ ತಲುಪಿದ್ದು, ಕುಡಿಯುವ ನೀರಿಗೂ ಸಮಸ್ಯೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾದ ಹೊಸಕೋಟೆ ಬಸವರಾಜ್, ಮರಂಕಯ್ಯ, ಪ್ರಭಾಕರ್, ನೇತ್ರಾವತಿ ಹಾಗೂ ಇತರರು ಪಾಲ್ಗೊಂಡಿದ್ದರು.
ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆಯಿಂದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪೊರಕೆ ಚಳವಳಿ ನಡೆಯಿತು. ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಪೊರಕೆ ಹಿಡಿದು ತಮ್ಮ ಆಕ್ರೋಶ ಹೊರ ಹಾಕಿದರು.
ರಾಜ್ಯದ 175 ತಾಲೂಕುಗಳು ಬರಪೀಡಿತವಾಗಿದ್ದು, ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಿದರೆ ಕುಡಿಯುವ ನೀರಿಗೂ ಸಮಸ್ಯೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ. ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರಕ್ಕೆ ಸಂಸದರು, ಸಚಿವರು ಮನವರಿಕೆ ಮಾಡಿಕೊಡುವ ಪ್ರಯತ್ನವನ್ನು ನಮ್ಮ ರಾಜ್ಯದ ಸಂಸದರು ಮಾಡಬೇಕು ಎಂದು ಸಂಘದ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾದ ಸಿ.ಜಿ. ಗಂಗಾಧರ್, ಪ್ರಭುಶಂಕರ್, ವಿಜಯೇಂದ್ರ, ಕೃಷ್ಣಯ್ಯ, ಶಾಂತರಾಜೇ ಅರಸ್, ನರಸಿಂಹೇಗೌಡ, ಗಿರಿಶ್, ಯಶ್ವಂತ್, ಆರ್. ಮಹದೇವಸ್ವಾಮಿ ಹಾಗೂ ಇತರರು ಪಾಲ್ಗೊಂಡಿದ್ದರು.