ಜಿಲ್ಲೆ

ಗೋವಿಂದ, ಗೋವಿಂದ ಕೆಆರ್‌ಎಸ್ ನೀರೆಲ್ಲ ಖಾಲಿ ಗೋವಿಂದ: ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ತ.ನಾಡಿಗೆ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಹಣೆಗೆ ಮೂರು ನಾಮ ಬಳಿದುಕೊಂಡು, ಕೈಯಲ್ಲಿ ಚಂಬು ಹಿಡಿದುಕೊಂಡು ಗೋವಿಂದ ಗೋವಿಂದ ಕೆಆರ್‌ಎಸ್‌ನಲ್ಲಿ ನೀರೆಲ್ಲ ಖಾಲಿ ಗೋವಿಂದ, ನಿಲ್ಲಿಸಿ ನಿಲ್ಲಿಸಿ ತಮಿಳುನಾಡಿಗೆ ಹರಿಯುತ್ತಿರುವ ನೀರು ನಿಲ್ಲಿಸಿ ಎಂದು ಘೋಷಣೆ ಕೂಗಿದರು.

ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಮುಖಂಡನೊಬ್ಬ ಅಂಗೈ ಕೊಯ್ದುಕೊಂಡು ರಕ್ತ ಚಿಮ್ಮಿಸಿ, ಕಾವೇರಿ ನಮ್ಮದು ರಕ್ತ ಕೊಟ್ಟರೂ ನೀರು ಬಿಡೆವು ಎಂದು ಘೋಷಣೆ ಕೂಗಿದರು. ಈ ವೇಳೆ ಪೊಲೀಸರಿಗೆ ಆತನಿಗೆ ಪ್ರಥಮ ಚಿಕಿತ್ಸೆ ನೀಡಿದರು. ಕನ್ನಡ ಸೇನೆ ಕಾರ್ಯಕರ್ತರು ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟಿಸಿ, ಕಾವೇರಿ ವಿಚಾರದಲ್ಲಿ ಕನ್ನಡಿಗರು ಮತ್ತು ರೈತರಿಗೆ ನ್ಯಾಯ ದೊರಕಿಸಿ ಕೊಡುವಂತೆ ಒತ್ತಾಯಿಸಿದರು. ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಡಲು ಮುಂದಾಗದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ, ಕನ್ನಡಪರ ಸಂಘಟನೆಗಳು, ಎಸ್‌ಡಿಪಿಐ, ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಪ್ರಮುಖ ರಸ್ತೆಗಳಲ್ಲಿ ಬೈಕ್ ರ‌್ಯಾಲಿ ನಡೆಸಿದರು.