ಮಂಡ್ಯ: ಜಿಲ್ಲೆಯಲ್ಲಿ ಕಾವೇರಿ ಹೋರಾಟ ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಮಂಗಳವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಪ್ರತಿದಿನ 3 ಸಾವಿರ ಕ್ಯೂಸೆಕ್‌ನಂತೆ ಆ.15ರವರೆಗೆ ತಮಿಳುನಾಡಿಗೆ ನೀರು ಹರಿಸಬೇಕೆಂದು ಆದೇಶ ನೀಡಿದೆ. ಇದರಿಂದಾಗಿ ಕಾವೇರಿ ಚಳವಳಿ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
124.80 ಅಡಿ ಗರಿಷ್ಟ ಸಂಗ್ರಹದ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಮಂಗಳವಾರ 96.80 ಅಡಿಗೆ ಕುಸಿದಿದೆ. 7,134 ಕ್ಯೂಸೆಕ್ ಒಳಹರಿವಿದ್ದರೆ, ಡ್ಯಾಂನಿಂದ 5,688 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಭವಿಷ್ಯದ ದಿನಗಳನ್ನು ಗಮನಿಸಿದರೆ ಕುಡಿಯುವ ನೀರಿಗೂ ತತ್ವಾರ ಎದುರಾಗುವ ಹಿನ್ನೆಲೆಯಲ್ಲಿ ಹಾಗೂ ಬೆಳೆದು ನಿಂತಿರುವ ಬೆಳೆ ಒಣಗುತ್ತಿರುವ ಕಾರಣ ನೀರಿಗಾಗಿ ಮಂಡ್ಯ ಮಾತ್ರವಲ್ಲದೆ ರಾಜ್ಯದ ವಿವಿಧೆಡೆ ಪ್ರತಿಭಟನೆ ಜೋರಾಗಿದೆ. ಸಂಕಷ್ಟದ ಪರಿಸ್ಥಿತಿ ಹಿನ್ನೆಲೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ನ್ಯಾಯ ಸಿಗುವ ವಿಶ್ವಾಸವಿತ್ತು. ಆದರೀಗ ಅದು ಕೂಡ ಹುಸಿಯಾಗಿದೆ. ಸಮಿತಿ ತ.ನಾಡು ಮನವಿಯನ್ನು ಪುರಸ್ಕರಿಸಿ ಕರ್ನಾಟಕದ ಅದರಲ್ಲಿಯೂ ಕಾವೇರಿ ಕಣಿವೆ ಜಿಲ್ಲೆಗಳ ಮೇಲೆ ಬರೆ ಎಳೆದಿದೆ.
ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿರುವ ಹಾಗೂ ಕೃಷ್ಣರಾಜಸಾಗರದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಧರಣಿ ಮಂಗಳವಾರ ಮುಂದುವರೆಯಿತು.
ಸರ್‌ಎಂವಿ ಪ್ರತಿಮೆ ಎದುರು ಸಮಿತಿ ಸದಸ್ಯರು, ರೈತರು, ಕನ್ನಡಪರ ಹೋರಾಟಗಾರರು 25ನೇ ದಿನವೂ ಧರಣಿ ಪೂರೈಸಿತು. ಕೇಂದ್ರ, ರಾಜ್ಯ ಸರ್ಕಾರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಜಿಲ್ಲೆಯ ಶಾಸಕರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಹಾಗೂ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಮಿತಿಯ ಆದೇಶದ ಪ್ರತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ ಹಾಗೂ ಸರ್ವೋಚ್ಚ ನ್ಯಾಯಾಲಯದಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ. ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿ ಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ರೈತ ಹಿತ ರಕ್ಷಣಾ ಸಮಿತಿಯ ಸುನಂದಾ ಜಯರಾಂ, ಕಾರಸವಾಡಿ ಮಹದೇವು, ಕೆ.ಬೋರಯ್ಯ, ಕನ್ನಡಸೇನೆ ಮಂಜುನಾಥ್, ಬೇಕ್ರಿ ರಮೇಶ್, ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಅಂಬುಜಮ್ಮ ಇತರರಿದ್ದರು.