ಮಂಡ್ಯ: ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ರಾಜ್ಯ ಸರ್ಕಾರದ ನಡೆ ಖಂಡಿಸಿ ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸೋಮವಾರ ಐದನೇ ದಿನ ಪೂರೈಸಿತು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ತಮಿಳುನಾಡಿಗೆ ನೀರು ಹರಿಸಬೇಡಿ ಎಂದು ರೈತರು ಹಾಗೂ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಆದರೂ ರಾಜ್ಯ ಸರ್ಕಾರ ತ.ನಾಡಿಗೆ ನೀರು ಹರಿಸುತ್ತಿರುವುದು ರೈತರಿಗೆ ಮಾಡಿದ ದ್ರೋಹವಾಗಿದೆ. ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಹಾಗೂ ಜನರ ಸಂಕಷ್ಟದ ಕೂಗು ಕೇಳಿಸುತ್ತಿಲ್ಲ. ಆದ್ದರಿಂದ ಹಿಂದಿನ ರೀತಿ ದೊಡ್ಡಮಟ್ಟದಲ್ಲೇ ಚಳವಳಿಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಇದಕ್ಕೆ ಜಿಲ್ಲೆ ಮಾತ್ರವಲ್ಲ, ಕಾವೇರಿ ಕೊಳ್ಳದ ಎಲ್ಲ ಜಿಲ್ಲೆಗಳ ರೈತರು ಹಾಗೂ ಕನ್ನಡ ಸಂಘಟನೆಗಳು ಸಾಥ್ ನೀಡಬೇಕೆಂದು ಮನವಿ ಮಾಡಿದರು.
ಕಾವೇರಿ ನದಿ ನೀರು ಸಮಸ್ಯೆ ಎದುರಾದಾಗ ಎಲ್ಲರೂ ಒಗ್ಗೂಡಿ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಸಹಯೋಗದಲ್ಲಿ ಪ್ರತಿಭಟನೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಸಂಘಟನೆಗಳು ಬೇರೆ ಬೇರೆ ಕಡೆ ಪ್ರತ್ಯೇಕವಾಗಿ ಪ್ರತಿಭಟನೆ ಮಾಡುತ್ತಿವೆ. ಇದರಿಂದಾಗಿ ನಮ್ಮನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ರೈತ ಹಿತರಕ್ಷಣಾ ಸಮಿತಿ ಸಹಯೋಗದಲ್ಲೇ ಎಲ್ಲ ಸಂಘಟನೆಗಳು ಒಗ್ಗೂಡಿ ಹೋರಾಟ ಮಾಡುವಂತೆ ಕರೆ ನೀಡಿದರು.
ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ಕೆರೆ ಚಳವಳಿ ರಮೇಶ್‌ಗೌಡ, ರೈತ ಹಿತ ರಕ್ಷಣಾ ಸಮಿತಿಯ ಸುನಂದಾ ಜಯರಾಂ, ಕೆ ಬೋರಯ್ಯ, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ಮೈಷುಗರ್ ಕಬ್ಬು ಒಪ್ಪಿಗೆದಾರರ ಸಂಘದ ಶಂಭೂನಹಳ್ಳಿ ಕೃಷ್ಣ, ಸಾತನೂರು ವೇಣುಗೋಪಾಲ್, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ಕಿರಂಗೂರು ಪಾಪು, ಎಂ.ಎಲ್.ತುಳಸೀಧರ್ ಇತರರಿದ್ದರು.