ಜಿಲ್ಲೆ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ: ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಕಾವೇರಿ ನದಿ ನೀರಿಗಾಗಿ ವಾರಕ್ಕೊಮ್ಮೆ ಚಳವಳಿ ಹಿನ್ನೆಲೆಯಲ್ಲಿ ಹಿತರಕ್ಷಣಾ ಸಮಿತಿ ಸದಸ್ಯರು ಸೋಮವಾರ ನಗರದ ಪ್ರತಿಭಟನೆ ನಡೆಸಿದರು.

ಸರ್‌ಎಂವಿ ಪ್ರತಿಮೆ ಎದುರು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಆಶ್ರಯದಲ್ಲಿ ಹೋರಾಟಗಾರರು ಭಿತ್ತಿಪತ್ರಗಳನ್ನು ಅಂಟಿಸುವ ಮೂಲಕ ಪ್ರತಿಭಟಿಸಿದರು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯ ಆಗುತ್ತಿದೆ. ಆಳುವ ಸರ್ಕಾರ ರೈತರಿಗೆ ನ್ಯಾಯ ದೊರಕಿಸಿಕೊಡಲು ಮುಂದಾಗುತ್ತಿಲ್ಲ. ತಮಿಳುನಾಡಿಗೆ ನಿರಂತರ ನೀರು ಹರಿಸಿದ ಪರಿಣಾಮ ಜಲಾಶಯಗಳಲ್ಲಿ ನೀರಿಲ್ಲದಂತಾಗಿದೆ. ರೈತರು ಬೆಳೆ ಹಾಕಬಾರದು ಎಂದು ಸರ್ಕಾರ ಘೋಷಿಸಿದೆ. ಇದರಿಂದಾಗಿ ಎರಡು ಬೆಳೆ ಕೈ ತಪ್ಪಿದೆ. ಜತೆಗೆ ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯಲ್ಲಿ ಅಂದಾಜು 3.600 ಕೋಟಿ ರೂ ಬೆಳೆ ನಷ್ಟವಾಗಿದೆ. ಸರ್ಕಾರ ಈ ಕೂಡಲೇ ಬೆಳೆ ನಷ್ಟ ಪರಿಹಾರ ಪಾವತಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಬೋರಯ್ಯ, ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಫಯಾಜ್, ನಾರಾಯಣಸ್ವಾಮಿ ಇತರರಿದ್ದರು.