ಮಂಡ್ಯ: ಕೆಆರ್‌ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಭಾನುವಾರ ರಾಜ್ಯ ಸರ್ಕಾರದ ವಿರುದ್ಧ ಕಪ್ಪುಬಾವುಟ ಪ್ರದರ್ಶಿಸಿದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸದಸ್ಯರನ್ನು ನಗರದಲ್ಲಿ ಪೊಲೀಸರು ಬಂಧಿಸಿದರು.
ಸರ್‌ಎಂವಿ ಪ್ರತಿಮೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕಪ್ಪು ಬಾವುಟ ಪ್ರದರ್ಶಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಈ ನಡುವೆ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶಕ್ಕೆಂದು ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಬೋರಯ್ಯ, ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ, ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ, ಅಂಬುಜಮ್ಮ, ಇಂಡುವಾಳು ಚಂದ್ರಶೇಖರ್, ಕನ್ನಡಸೇನೆ ಮಂಜುನಾಥ್, ಮಹಾಂತಪ್ಪ ಸೇರಿದಂತೆ ಹಲವರನ್ನು ಪೊಲೀಸರು ಕರೆದೊಯ್ದರು. ಇದಕ್ಕೂ ಮುನ್ನ ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆಗಾಗಿ ಗ್ಯಾರಂಟಿ ಸಮಾವೇಶ ಮಾಡುತ್ತಿದ್ದಾರೆ. ಜತೆಗೆ ನೆರೆ ರಾಜ್ಯಕ್ಕೆ ನೀರು ಹರಿಸಿ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜನ, ಜಾನುವಾರುಗಳಿಗೆ ಕುಡಿಯಲು ಅನುಕೂಲವಾಗುವಂತೆ ನಾಲೆಗಳಿಗೆ ನೀರು ಬಿಡುಗಡೆ ಮಾಡಿ ಎಂದು ರೈತರು ಒತ್ತಾಯ ಮಾಡಿದ್ದಾರೆ. ಆದರೂ ನೀರು ಬಿಡದ ಸರ್ಕಾರ, ಇದೀಗ ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುವ ಮೂಲಕ ತಮಿಳುನಾಡಿಗೆ ಹರಿಸುತ್ತಿದೆ. ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡಲು ಅನುಕೂಲವಾಗುವಂತೆ ಅಣೆಕಟ್ಟೆ ಭರ್ತಿ ಮಾಡಿಕೊಳ್ಳಲು ನದಿಗೆ ನೀರು ಬಿಡಲಾಗಿದೆ ಎಂದು ಸಬೂಬು ಹೇಳಲಾಗುತ್ತಿದೆ. ರೈತರ ಹಿತ ಕಾಪಾಡುವ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳೆ ರಕ್ಷಣೆಗೆ ನೀರು ನೀಡದೆ ತಮಿಳುನಾಡಿಗೆ ನೀರು ಬಿಡುವ ಮೂಲಕ ವಚನ ಭ್ರಷ್ಟರಾಗಿದ್ದಾರೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ನಿರಂತರ ಅನ್ಯಾಯ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ ಎಂದು ಕಿಡಿಕಾರಿದರು.