ಜಿಲ್ಲೆ

ಜಯಂತಿ ಅರ್ಥಪೂರ್ಣ ಆಚರಿಸಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ ; ಜಿಲ್ಲೆಯಲ್ಲಿ ಮೇ.12 ರಂದು ಜರುಗುಲಿರುವ ಭಗವಾನ್ ಬುದ್ಧ ಜಯಂತಿ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಿ ಎಂದು ಎಸಿ ಪಿ.ಪ್ರಮೋದ್ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭಗವಾನ್ ಬುದ್ಧ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಭಗವಾನ್ ಬುದ್ಧನ ಜಯಂತಿ ಕಾರ್ಯಕ್ರಮವನ್ನು ಆಚರಿಸಲು ರಾಜ್ಯ ಸರ್ಕಾರದ ನಿರ್ದೇಶನವಿದೆ. ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲಾಗುವುದು.

ಮೇ.12 ರಂದು ಸಂಜೆ 06.30 ಗಂಟೆಗೆ ಇಲ್ಲಿನ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ ಆಚರಿಸಲು ನಿರ್ಧರಿಸಲಾಗಿದ್ದು, ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳ, ಆಸನಗಳ ಸ್ವಚ್ಛತೆ, ಕುಡಿವ ನೀರಿನ ಹಾಗೂ ಇತರೆ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಅಂದು ಸಂಜೆ 04.30 ಗಂಟೆಗೆ ನಗರದ ಮುನಿಸಿಪಲ್ ಕಾಲೇಜು ಮೈದಾನದಿಂದ ಜಯಂತಿ ಅಂಗವಾಗಿ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಕಾರ್ಯಕ್ರಮದವರೆಗೆ ನಡೆಯಲಿದೆ.

ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು. ಬುದ್ಧ ಗಾಯನ ಕಾರ್ಯಕ್ರಮ ಏರ್ಪಡಿಸಲಾಗುವುದು. ಮಹಾನ್ ವ್ಯಕ್ತಿಗಳ ವಿಚಾರಧಾರೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನುರಿತ ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು ಎಂದರು.

ಜಯಂತಿ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು. ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಬುದ್ಧ ವಿಹಾರ ಧ್ಯಾನ ಕೇಂದ್ರ ಆರಂಭಿಸಬೇಕು ಎಂದು ಸಭೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪ್ರಸ್ತಾಪಿಸಿದರು.