ವಿಜಯಪುರ:ನಗರದಲ್ಲಿ ಜಿಲ್ಲಾಡಳಿತದಿಂದ ಅ. 23 ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ ಕುರಿತು ಗುರುವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂದು ಬೆಳಗ್ಗೆ 9.30ಕ್ಕೆ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ಲ ಹನುಮಂತರಾಯ ರಂಗಮಂದಿರದವರೆಗೆ ಚನ್ನಮ್ಮಳ ಭಾವಚಿತ್ರ ಮೆರವಣಿಗೆ, 10.30ಕ್ಕೆ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.ಕಿತ್ತೂರು ರಾಣಿ ಚನ್ನಮ್ಮ ಜ್ಯೋತಿಯಾತ್ರೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, ಅ. 15 ರಂದು ಬಾಗಲಕೋಟೆಯಿಂದ ಕೊಲ್ಹಾರ ಮಾರ್ಗವಾಗಿ ಜಿಲ್ಲೆಗೆ ಆಗಮಿಸಲಿದೆ. ಅಂದು ಸಂಜೆ 6.30 ರಿಂದ 7.30 ರವರೆಗೆ ಜಿಲ್ಲೆಗೆ ಜ್ಯೋತಿಯಾತ್ರೆಯನ್ನು ಸ್ವಾಗತಿಸಲು ತಿಳಿಸಿದರು. ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಮತ್ತಿತರರಿದ್ದರು.