ಜಿಲ್ಲೆ

ಪ್ರಜಾಪ್ರಭುತ್ವಕ್ಕೆ ಮಾರಕ

Dharwada - Santosh Vaidya

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಸಂಸತ್ ಕಲಾಪದಿಂದ ನೂರಕ್ಕೂ ಹೆಚ್ಚು ಸಂಸದರನ್ನು ಅಮಾನತು ಮಾಡಿರುವ ವಿಚಾರ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿದಿರುವುದಕ್ಕೆ ಸಾಕ್ಷಿ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಜನರೇ ತೀರ್ಮಾನ ಕೈಗೊಳ್ಳುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳ ಸಂಸದರ ಅಮಾನತು ಕ್ರಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಅಧಿವೇಶನದಲ್ಲಿ ಚರ್ಚೆಗಳು ಆಗಬೇಕು. ಧರಣಿ ಮಾಡಿದ್ದಾರೆ ಎಂದು ನೆಪ ಮಾಡಿಕೊಂಡು ಅಮಾನತು ಮಾಡಿರುವುದು ಸರಿಯಲ್ಲ ಎಂದರು.

ಒಂದು ಕಾಲಕ್ಕೆ ಬಿಜೆಪಿಯನ್ನು ಬಾಯಿಗೆ ಬಂದಂತೆ ಬೈಯುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದವರು ಈಗ ಅದೇ ಪಕ್ಷವನ್ನು ಅಪ್ಪಿಕೊಳ್ಳುತ್ತಿದ್ದಾರೆ. ರಾಮಮಂದಿರದ ಬಗ್ಗೆಯೂ ದೇವೇಗೌಡರು ಟೀಕಿಸುತ್ತಿದ್ದರು. ಕುಟುಂಬದ ಸದಸ್ಯರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಗೌಡರು ಎಷ್ಟು ಸೀಟು ಕೇಳಿದ್ದಾರೋ, ಅವರು ಎಷ್ಟು ಸೀಟು ಕೊಡುತ್ತಾರೋ ಎಂಬುದು ಅವರವರಿಗೆ ಬಿಟ್ಟ ವಿಚಾರ ಎಂದು ಉತ್ತರಿಸಿದರು.

ನಾನು ಖಾಸಗಿ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ. ಲೋಕಸಭೆ ಚುನಾವಣೆಗೂ ದೆಹಲಿ ಭೇಟಿಗೂ ಯಾವುದೇ ಸಂಬಂಧವಿಲ್ಲ. ಪಕ್ಷದ ವರಿಷ್ಠರನ್ನು ಭೇಟಿ ಮಾಡಿಲ್ಲ. ಧಾರವಾಡ ಲೋಕಸಭೆ ಕ್ಷೇತ್ರಕ್ಕೆ ನಾನು ಓರ್ವ ಆಕಾಂಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರಬಹುದು. ನಾನು ಆಕಾಂಕ್ಷಿ ಅಲ್ಲ ಎಂದು ಅವರ ಎದುರೇ ಸ್ಪಷ್ಟವಾಗಿ ಹೇಳಿದ್ದೇನೆ. ಕ್ಷೇತ್ರದ ವೀಕ್ಷಕರು ಇತ್ತೀಚೆಗಷ್ಟೇ ಆಕಾಂಕ್ಷಿಗಳೊಂದಿಗೆ ಸಭೆ ನಡೆಸಿದ್ದಾರೆ. ಅವರು ಟಿಕೆಟ್ ಆಕಾಂಕ್ಷಿಗಳ ಹೆಸರನ್ನು ಶಾರ್ಟ್​ಲಿಸ್ಟ್ ಮಾಡಿದ್ದಾರೋ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ ಎಂದರು.