ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಎಸ್‌ಎಸ್‌ಎಲ್‌ಸಿ ಪಾಸಾಗಿ ಹೊರಹೋಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮುಂದಿನ ವಿದ್ಯಾಭ್ಯಾಸದ ಆಯ್ಕೆ ಕುರಿತಾದ ಒಂದು ಚಾರ್ಟ್‌ನ್ನು ಎಲ್ಲ ವಿದ್ಯಾರ್ಥಿ ನಿಲಯ, ವಸತಿ ಶಾಲೆಗಳಲ್ಲಿ ಪ್ರದರ್ಶಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಸೂಚಿಸಿದರು.
ನಗರದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ಆಹ್ವಾನಿಸುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಹಾಗೂ ಇತರೆ ಯೋಜನೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಂದ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸ್ವೀಕರಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಈ ವಿಷಯದಲ್ಲಿ ಅಧಿಕಾರಿಗಳು ನಿರ್ಲಕ್ಷೃ ವಹಿಸಬಾರದು ಎಂದು ಹೇಳಿದರು.
ಈ ನಾಲ್ಕು ಇಲಾಖೆಗಳ ವ್ಯಾಪ್ತಿಯಲ್ಲಿನ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿ ಸ್ಥಗಿತ, ನಿವೇಶನ ಸಮಸ್ಯೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಇತರ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ನನ್ನ ಗಮನಕ್ಕೆ ತರಬೇಕು. ಅವುಗಳನ್ನು ಪರಿಹರಿಸಲಾಗುವುದು. ಯಾವುದೇ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನಿರ್ಲಕ್ಷತನ ವಹಿಸಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೆ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಾಮದುರ್ಗ ತಾಲೂಕಿನ ಬಟಕುರ್ಕಿಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸಂಬಂಧಿಸಿದ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ತಾಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆ ಬಗೆಹರಿಸಲು ಕ್ರಮಕೈಕೊಳ್ಳಬೇಕು. ಕಳೆದ ಐದು ವರ್ಷಗಳಲ್ಲಿ ವಸತಿ ಶಾಲೆಗಳಲ್ಲಿ 10ನೇ ತರಗತಿ ಮಾಡಿದ ಪದವಿ ಪೂರ್ಣಗೊಳಿಸಿದವರು ಈಗ ಎಲ್ಲಿದ್ದಾರೆ. ಏನ್ನೂ ಮಾಡುತ್ತಿದ್ದಾರೆ. ಅವರ ಈಗಿನ ಸ್ಥಿತಿಗತಿ ಕುರಿತು ಮಾಹಿತಿ ಕಲೆಹಾಕಲು ಒಂದು ತಂಡ ರಚಿಸಬೇಕು. ಈ ಮಾಹಿತಿಯನ್ನು ಮಾ.31 ರೊಳಗೆ ಸಲ್ಲಿಸುವಂತೆ ನಾಲ್ಕು ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಲಕ್ಷ್ಮಣ ಬಬಲಿ, ಹಿಂದುಳಿದ ವರ್ಗ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಶಿವಪ್ರಿಯಾ ಕಡೆಚೂರ, ಜಿಲ್ಲಾ ಪರಿಶಿಷ್ಟ ವರ್ಗ ಕಲ್ಯಾಣ ಅಧಿಕಾರಿ ಬಸವರಾಜ ಕೊರಿಹುಲಿ, ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾಧಿಕಾರಿ ಮಿರ್ಜಿಣ್ಣವರ ಇತರರಿದ್ದರು.
--