ಜಿಲ್ಲೆ

ಆರೋಗ್ಯ ಕೇಂದ್ರಗಳಲ್ಲಿ ನಾಯಿ ಕಡಿತಕ್ಕೆ ತಕ್ಷಣವೇ ರೇಬಿಸ್ ಲಸಿಕೆ ಸಿಗಬೇಕು; ರಾಹುಲ ಶಿಂಧೆ

ಮಂಜುನಾಥ ಕೋಳಿಗುಡ್ಡ

ವಿಜಯವಾಣಿ ಸುದ್ದಿಜಾಲ ಬೆಳಗಾವಿ

ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ನಾಯಿ ಕಡಿತಕ್ಕೆ ತಕ್ಷಣವೇ ರೇಬಿಸ್ ಲಸಿಕೆ (ಎಆರ್‌ವಿ) ಲಭ್ಯವಾಗಬೇಕು. ಚಿಕಿತ್ಸೆಗಾಗಿ ಜನರು ಅಲೆದಾಡುವ ಪರಿಸ್ಥಿತಿ ನಿರ್ಮಿಸಬೇಡಿ ಎಂದು ವೈದ್ಯಾಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ ಶಿಂಧೆ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ನಾಯಿ ಕಡಿತದಿಂದಾಗುವ ಮರಣಗಳನ್ನು ತಡೆಗಟ್ಟಲು ವೈದ್ಯಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದರ ಜತೆಗೆ ತುರ್ತು ಚಿಕಿತ್ಸೆ ನೀಡಲು ಲಸಿಕೆ ದಾಸ್ತಾನು ಇಟ್ಟುಕೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷೃ ವಹಿಸುವುದು ಸರಿಯಾದ ಕ್ರಮವಲ್ಲ ಎಂದರು.

ಸಮುದಾಯ ಆರೋಗ್ಯ ಕೇಂದ್ರಗಳ ವಿಜನ್ ಸೆಂಟರ್ ಗಳಲ್ಲಿ ಅರ್ಹ ಫಲಾನುಭವಿಗಳಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳಲು ಕಣ್ಣಿನ ತಪಾಸಣಾ ಶಿಭಿರಗಳನ್ನು ಆಯೋಜಿಸಬೇಕು.ರಾಷ್ಟ್ರೀಯ ಓರಲ್ ಹೆಲ್ತ್ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಸಗಿ ದಂತ ಮಾಹಾ ವಿದ್ಯಾಲಯ ಕಾಲೇಜಿನ ಸಹಯೋಗದೊಂದಿಗೆ ಮೊಬೈಲ್ ಡೆಂಟಲ್ ವಾಹನಗಳನ್ನು ಬಳಿಸಿಕೊಂಡು ದಂತ ಚಿಕಿತ್ಸಾ ಶಿಬಿರ ಹಮ್ಮಿಕೊಂಡು ಜನರಿಗೆ ಆರೋಗ್ಯ ಸೌಲಭ್ಯ ಕಲ್ಪಿಸಬೇಕು ಎಂದರು.

ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜನರಿಗೆ ಶುದ್ಧವಾದ ಕುಡಿಯುವ ನೀರು ಪೂರೈಕೆ ಮಾಡಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. ನೀರಿಗೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರಿಗೆ ಕುದಿಸಿ ಆರಿಸಿ ನೀರು ಕುಡಿಯುವಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಡಿ 0-5 ವರ್ಷದೊಳಗಿನ ಮಕ್ಕಳಿಗೆ ಲಸಿಕಾ ವೇಳಾಪಟ್ಟಿ ಪ್ರಕಾರ ಲಸಿಕೆಗಳನ್ನು ನೀಡಿ ಪ್ರಗತಿ ಕುಂಠಿತವಾಗದಂತೆ ಪ್ರಗತಿ ಸಾಧಿಸಲು ಸೂಚನೆ ನೀಡಿದರು.

ಜಿಪಂ ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ್, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ, ಚಿಕ್ಕೋಡಿ ಅಪರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್. ಗಡೇದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕೇಶವ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಚಾಂದನಿ ದೆವಡಿ ಇತರರಿದ್ದರು.