ಜಿಲ್ಲೆ

‘ವೀರಶೈವ ಲಿಂಗಾಯತ’ರನ್ನು ಒಬಿಸಿಗೆ ಸೇರಿಸಿ

reportermys

ಚಾಮರಾಜನಗರ: ವೀರಶೈವ ಲಿಂಗಾಯಿತ ಸಮುದಾಯವನ್ನು ಕೇಂದ್ರದ ಇತರೆ ಹಿಂದುಳಿದ ವರ್ಗಗಳ ಪಟ್ಟಿ (ಓಬಿಸಿ)ಗೆ ಸೇರಿಸುವಂತೆ ಒತ್ತಾಯಿಸಿ ವೀರಶೈವ ಲಿಂಗಾಯತ ಸಮುದಾಯದ ವಿವಿಧ ಸಂಘಟನೆಗಳ ವತಿಯಿಂದ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನ ಮುಂಭಾಗದ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು, ಜೈ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತಲುಪಿ ಜಿಲ್ಲಾಡಳಿತ ಭವನದ ಮುಖ್ಯ ದ್ವಾರದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಕಾರಿ ಚಾರುಲತಾ ಸೋಮಲ್ ಮುಖಾಂತರ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಗೆ ಮನವಿ ಸಲ್ಲಿಸಲಾಯಿತು.
ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷೆ ಗೀತಾ ಮಹದೇವಪ್ರಸಾದ್, ರಾಜ್ಯ ಮಹಿಳಾ ಉಪಾಧ್ಯಕ್ಷೆ ಪರಿಮಳಾ ನಾಗಪ್ಪ, ಅಧ್ಯಕ್ಷ ಮೂಡ್ಲುಪುರ ನಂದೀಶ್, ಜಿಲ್ಲಾ ಕಾರ್ಯದರ್ಶಿ ನಾಗೇಂದ್ರ, ಉಪಾಧ್ಯಕ್ಷರಾದ ಗಂಗಪ್ಪ, ಪುಟ್ಟಣ್ಣ, ಬಿ.ರತ್ನಮ್ಮ, ಜಿ.ಎಂ.ಪ್ರಭುಸ್ವಾಮಿ, ರಾಜ್ಯ ಸಮಿತಿ ಸದಸ್ಯ ಸುಜೇಂದ್ರ, ಪದಾಕಾರಿಗಳಾದ ವಿಶ್ವನಾಥ್, ಪುರುಷೋತ್ತಮ, ಗಾಯಿತ್ರಿ, ಉಮಾ, ರೇಖಾ, ಜ್ಯೋತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೋ.ಕೆ.ಆರ್.ಮಲ್ಲಿಕಾರ್ಜುನಪ್ಪ, ಕಾಂಗ್ರೆಸ್ ಜಿಲ್ಲಾ ವಕ್ತಾರ ಕೆರೆಹಳ್ಳಿ ನವೀನ್ ಸೇರಿದಂತೆ ಎರಡು ಸಾವಿರಕ್ಕೂ ಹೆಚ್ಚು ಜನರು ಇದ್ದರು.