ಹನೂರಿನಲ್ಲಿ ಮಾಜಿ ಶಾಸಕ ಆರ್.ನರೇಂದ್ರ ಅವರು ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂಜುಂಡಸ್ವಾಮಿ, ಮುಕುಂದವರ್ಮ, ಈಶ್ವರ್, ಶಿವಕುಮಾರ್ ಇತರರಿದ್ದರು.
- ಮಾಜಿ ಶಾಸಕ ಆರ್.ನರೇಂದ್ರ ಅಭಿಪ್ರಾಯ
ಹನೂರು: ಪ್ರತಿಯೊಬ್ಬರೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಯನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಗುರಿ ಸಾಧಿಸಲು ಸಹಕಾರಿಯಾಗುತ್ತದೆ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಬಡತನ ಹಾಗೂ ಅಸಮಾನತೆಯ ಬೇಗೆಯನ್ನು ಅನುಭವಿಸಿದ ಡಾ. ಬಿ.ಆರ್ ಅಂಬೇಡ್ಕರ್ ಅವರು ಸಮಾನತೆಗಾಗಿ ಶ್ರಮಿಸಿದ ಮಹಾನ್ ನಾಯಕ. ಸಮಾಜದಲ್ಲಿನ ಅಸಮಾನತೆಯನ್ನು ಶಿಕ್ಷಣದಿಂದ ಹೋಗಲಾಡಿಸಲು ಸಾಧ್ಯ ಎಂಬುದನ್ನು ಮನಗಂಡ ಇವರು ದೇಶ, ವಿದೇಶದಲ್ಲಿ ಶಿಕ್ಷಣ ಪಡೆದು 32 ಪದವಿಯನ್ನು ಪಡೆಯುವುದರ ಮೂಲಕ ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಶ್ರೇಷ್ಠ ತಜ್ಞ. ಸಂವಿಧಾನದ ಆಧಾರದ ಮೇಲೆ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಕಾರ್ಯನಿರ್ವಹಿಸುತ್ತಿದ್ದು, ಸಮಾನತೆಯ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸಿದೆ. ಆದ್ದರಿಂದ ಇವರ ಆದರ್ಶ ಎಲ್ಲ ವರ್ಗಕ್ಕೂ ಪ್ರೇರಣೆಯಾಗಿದೆ ಎಂದು ತಿಳಿಸಿದರು.
ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಕುಂದವರ್ಮ, ರಾಮಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಶಿವಕುಮಾರ್, ಜಿಪಂ ಮಾಜಿ ಸದಸ್ಯ ಕೊಪ್ಪಾಳಿ ಮಹದೇವನಾಯ್ಕ, ಪಪಂ ಮಾಜಿ ಉಪಾಧ್ಯಕ್ಷರಾದ ಗಿರೀಶ್, ಬಸವರಾಜು, ಮುಖಂಡರಾದ ಚಿಕ್ಕತಮ್ಮಯ್ಯ, ವೆಂಕಟರಮಣನಾಯ್ಡು, ಸಿದ್ದರಾಜು, ಪುಟ್ಟರಾಜು, ಮಾದೇಶ್ ಇನ್ನಿತರರು ಇದ್ದರು.