ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಡಿಸಿ ಟಿ.ಜವರೇಗೌಡ ಅಧ್ಯಕ್ಷತೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಸಂಬಂಧ ನೋಂದಾಯಿತ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಶುಕ್ರವಾರ ಸಭೆ ನಡೆಯಿತು. ಎಸ್.ಬಾಲಸುಬ್ರಹ್ಮಣ್ಯ, ಎನ್.ನಾಗಯ್ಯ, ಎಂ.ಚಿಕ್ಕಮಹದೇವ, ಎಸ್.ಮಹೇಶ್‌ಗೌಡ ಇತರರು ಇದ್ದರು.
- ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ ಅಧ್ಯಕ್ಷತೆಯಲ್ಲಿ ಮುಖಂಡ ಸಭೆ
- ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಶುಕ್ರವಾರ ಆಯೋಜಿಸಿದ್ದ ಸಭೆ
ಚಾಮರಾಜನಗರ: ಜಿಲ್ಲೆಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯಕ್ಕೆ ಸಹಕಾರ ನೀಡಿ ಚುನಾವಣಾ ಆಯೋಗದ ಮಹತ್ತರ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ವಿವಿಧ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಸಂಬಂಧ ನೋಂದಾಯಿತ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಶುಕ್ರವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿ ಸಿದ್ದಪಡಿಸುವಿಕೆ, ಮತದಾರರ ಪಟ್ಟಿಯಲ್ಲಿ ಎಲ್ಲ ಅರ್ಹ ಮತದಾರರ ಸೇರ್ಪಡೆ ಅಥವಾ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಚಿತಪಡಿಸುವುದು ವಿಶೇಷ ಸಮಗ್ರ ಪರಿಷ್ಕರಣೆಯ ಪ್ರಮುಖ ಉದ್ದೇಶವಾಗಿದೆ. ಮುಕ್ತ ಹಾಗೂ ನಿಷ್ಪಕ್ಷಪಾತ ಚುನಾವಣೆ ನಡೆಸಲು ಮತದಾರರ ಪಟ್ಟಿಯ ವಿಶ್ವಾಸಾರ್ಹತೆ ಕಾಪಾಡಿಕೊಳ್ಳುವ ಸಲುವಾಗಿ ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಸುತ್ತಿದೆ. ಇಂತಹ ಮಹತ್ತರ ಪ್ರಕ್ರಿಯೆಗೆ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳು ಅಗತ್ಯ ಸಹಕಾರ ನೀಡಬೇಕಿದೆ ಎಂದರು.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ 2026ರ ಅ.1 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಜುಲೈ 29ರವರೆಗೆ ಎಲ್ಲಾ ಮತಗಟ್ಟೆ ಅಧಿಕಾರಿಗಳು (ಬಿ.ಎಲ್.ಒ) ಜಿಲ್ಲೆಯ ಪ್ರತಿ ಮನೆಮನೆಗೂ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದು, ಅರ್ಹ ಮತದಾರರು ಗಣತಿ ನಮೂನೆಯನ್ನು ಭರ್ತಿಮಾಡಿ ಮತ್ತೆ ಅದನ್ನು ಬಿ.ಎಲ್.ಒ ಗಳಿಗೆ ತಲುಪಿಸುವ ಕಾರ್ಯ ಪ್ರಗತಿಯಲ್ಲಿದೆ. ಎಲ್ಲಾ ಮಾಹಿತಿಯನ್ನು ಕ್ರೋಢಿಕರಿಸಿ ಆ.5ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳಿಸಲಾಗುತ್ತದೆ. ಕರಡು ಪಟ್ಟಿ ಪ್ರಕಟ ಸಂಬಂಧ ಅಂದಿನಿಂದ ಸೆ. 4ರವರೆಗೆ ಮತದಾರರಿಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಅ, 3ರವರೆಗೂ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ಅಂತಿಮವಾಗಿ ಅ.7ರಂದು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕಚೇರಿ ಹಾಗೂ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 8,80,224 ಮತದಾರರಿದ್ದು, ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಜಿಲ್ಲೆಯಲ್ಲಿ 983 ಮತಗಟ್ಟೆಗಳನ್ನು ತೆರೆಯಲಾಗಿದೆ. ಪ್ರತಿ ಮತಗಟ್ಟೆಗೆ ತಲಾ ಒಬ್ಬರಂತೆ ಮತಗಟ್ಟೆ ಅಧಿಕಾರಿಗಳು ಹಾಗೂ 98 ಮಂದಿ ಮತಗಟ್ಟೆ ಅಧಿಕಾರಿಗಳ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಪರಿಷ್ಕರಣೆ ಕಾರ್ಯಕ್ಕೆ ನೆರವಾಗಲು ರಾಜಕೀಯ ಪಕ್ಷಗಳು ಸಹ ಒಟ್ಟು 2082 ಮಂದಿ ಬಿ.ಎಲ್.ಒ ಗಳನ್ನು ನೇಮಿಸಿವೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮನೆಮನೆಗಳಿಗೆ ಖುದ್ದು ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಿ ಭರ್ತಿಮಾಡಿದ ನಮೂನೆಗಳನ್ನು ಮತದಾರರಿಂದ ಪಡೆದು ಗಣಕೀಕರಣಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈವರೆಗೆ ಒಟ್ಟು 2,87,790 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದರು.
ಪರಿಷ್ಕರಣೆ ಕಾರ್ಯ ಸಂಬಂಧ ಮತದಾರರಿಗೆ ಅಗತ್ಯ ಮಾಹಿತಿ ನೀಡಲು ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿ ಕಚೇರಿ ಹಾಗೂ ಆಯಾ ತಾಲೂಕು ತಹಸೀಲ್ದಾರ್ ಕಚೇರಿಗಳಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ಹೇಳಿದರು.
ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎಸ್. ಬಾಲಸುಬ್ರಹ್ಮಣ್ಯ, ಎನ್. ನಾಗಯ್ಯ, ಎಂ. ಚಿಕ್ಕಮಹದೇವ, ಎಸ್. ಮಹೇಶ್ ಗೌಡ, ಸಯ್ಯದ್ ಅಸ್ರಮ್, ಎಸ್.ಹೆಚ್. ತೋಟಂದಾರ್ಯಸ್ವಾಮಿ, ಇತರರು ಸಭೆಯಲ್ಲಿ ಉಪಸಿತ್ಥರಿದ್ದರು.