- ಪಶು ಸಂಗೋಪನೆ, ರೇಷ್ಮೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಟೀಕೆ
- ವಿಬಿ-ಜಿ ರಾಮ್ ಜಿ ಯೋಜನೆಗೆ ತೀವ್ರ ವಿರೋಧ
ಚಾಮರಾಜನಗರ: ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಹೆಸರನ್ನು ಬದಲಾಯಿಸುವ ಮೂಲಕ ಬಿಜೆಪಿ ಗಾಂಧಿಯನ್ನು ಮತ್ತೊಮ್ಮೆ ಕೊಂದಿದೆ ಎಂದು ಪಶು ಸಂಗೋಪನೆ, ರೇಷ್ಮೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಟೀಕಿಸಿದರು.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ 2005 ರಲ್ಲಿ ನರೇಗಾ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಿಕೊಟ್ಟರು. ಈ ಮೂಲಕ ಮಹಾತ್ಮ ಗಾಂಧಿ ಅವರ ಗ್ರಾಮಸ್ವರಾಜ್ಯ ಕಲ್ಪನೆಯನ್ನು ಸಕಾರಗೊಳಿಸಿದರು. ಆದರೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿ, ಯೋನೆಯಲ್ಲಿ ಹಲವಾರು ಬದಲಾವಣೆಗಳನ್ನು ತಂದಿದೆ. ಈ ಮೂಲಕ ಗಾಂಧಿ ಮತ್ತು ಅವರ ಚಿಂತನೆಯನ್ನು ಮತ್ತೊಮ್ಮೆ ಕೊಲ್ಲುವ ಕೆಲಸವನ್ನು ಮಾಡಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಯೋಜನೆಯಲ್ಲಿ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಅವಕಾಶವನ್ನು ನೀಡಲಾಗಿದ್ದು, ಇದರಿಂದ ಗ್ರಾಮ ಪಂಚಾಯಿತಿ ಆಡಳಿತ ಸಂಪೂರ್ಣ ಮೊಟಕುಗೊಳ್ಳಲಿದೆ. ಸಾಮೂಹಿಕ ಅವಕಾಶವನ್ನು ಕಾಯ್ದೆ ನಿರಾಕರಿಸಲಿದೆ. ಇಂತಹ ಮಹತ್ತರವಾದ ಯೋಜನೆಯ ಕುರಿತು ಚರ್ಚಿಸಲು ಸಂಸತ್ತಿನಲ್ಲಿ ಕೇವಲ 8 ಗಂಟೆ ಮಾತ್ರ ಸಮಯಾವಕಾಶ ನೀಡಿ ಕಾಯ್ದೆಯನ್ನು ಜಾರಿಗೊಳಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.
ಬಿಜೆಪಿಯ ಮುಖಂಡರು ವಿಬಿ-ಜಿ ರಾಮ್ ಜಿ ಯೋಜನೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದು, ನರೇಗಾ ಯೋಜನೆಯಡಿ ಹೆಚ್ಚು ಭ್ರಷ್ಟಚಾರ ನಡೆಯುತ್ತಿತ್ತು ಎಂದು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಭ್ರಷ್ಟಚಾರ ನಡೆದಿಲ್ಲವೇ ಎಂದು ತಿರುಗೇಟು ನೀಡಿದರು. ನೂತನ ಯೋಜನೆಯನ್ನು ರಾಜ್ಯ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದರ ವಿರುದ್ಧ ನಿರಂತರವಾಗಿ ಹೋರಾಟ ರೂಪಿಸಲಾಗುವುದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎಚ್.ಎಂ.ಗಣೇಶ್‌ಪ್ರಸಾದ್, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಚುಡಾ ಅಧ್ಯಕ್ಷ ಮೊಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾ ವಕ್ತಾರ ಶಿವಕುಮಾರ್ ಹಾಜರಿದ್ದರು.