ಕೌದಳ್ಳಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು. ಮೀನಾ, ಮಲೆಯೂರು ಕಮಲಮ್ಮ, ರಾಧಾ, ಶೈಲಾ ಇತರರಿದ್ದರು.
ಹನೂರು: ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿರುವ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ನಡೆ ಸರಿಯಲ್ಲ ಎಂದು ಆರೋಪಿಸಿ ಸೋಮವಾರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ತಾಲೂಕಿನ ಕೌದಳ್ಳಿಯಲ್ಲಿ ಪ್ರತಿಭಟನೆ ನಡೆಯಿತು.
ಕೌದಳ್ಳಿ ಗ್ರಾಮದ ವೃತ್ತದಲ್ಲಿ ಜಮಾಯಿಸಿದ್ದ ಮಹಿಳೆಯರು ಗ್ರಾಮ ಪಂಚಾಯಿತಿವರೆಗೆ ಮುಖ್ಯ ರಸ್ತೆಯಲ್ಲಿ ಸಾಗಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ಮೀನಾ ಮಾತನಾಡಿ, ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಶೇ.33ರಷ್ಟು ಮಹಿಳಾ ಮೀಸಲಾತಿ ನೀಡಲು ಮಸೂದೆಯನ್ನು ಜಾರಿಗೆ ತರಲು ಮುಂದಾಗಿದೆ. ಆದರೆ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ವಿರೋಧಿಸಿದ್ದು, ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಜಾರಿಯಾಗದಂತೆ ತಡೆಯೊಡ್ಡಿದೆ. ಇದರಿಂದ ಮಹಿಳೆಯರಿಗೆ ಅನ್ಯಾಯವಾಗಲಿದೆ. ಮಹಿಳೆಯರಿಗೆ ರಾಜಕೀಯ ಹಕ್ಕು ನೀಡುವ ಸಂಭಂಧ 2023ರಲ್ಲಿ ಮಸೂದೆ ಪಾಸ್ ಆಗಿದೆ. ಆದರೂ ಜಾರಿಗೆ ತರದಿರುವುದು ನಿಜಕ್ಕೂ ವಿಪರ್ಯಾಸ. ಆದ್ದರಿಂದ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಮಲೆಯೂರು ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಶೈಲಾ, ಮಂಡಲ ಪ್ರಧಾನ ಕಾರ್ಯದರ್ಶಿ ರಾಧಾ, ಉಪಾಧ್ಯಕ್ಷೆ ಈಶ್ವರಿ ಇತರರು ಇದ್ದರು.