ಚಾಮರಾಜನಗರ: ತಾಲೂಕಿನ ವೆಂಕಟಯ್ಯನಛತ್ರ ಗ್ರಾಮದ ಉಪ್ಪಾರ ಬಡಾವಣೆಯಲ್ಲಿ ಮಳೆ ಹಾನಿ ಪರಿಹಾರ ನಿಧಿಯಡಿ 50 ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ ಹಾಗೂ ಪರಿಶಿಷ್ಟ ಜಾತಿ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ 20 ಲಕ್ಷ ರೂ. ವೆಚ್ಚದಲ್ಲಿ ಡಾ.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಸಚಿವರು, ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸ್ಥಳೀಯ ನಿವಾಸಿಗಳು ಸಹಕಾರ ನೀಡಬೇಕು. ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ಅಚ್ಚುಕಟ್ಟಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಇದೇ ವೇಳೆ ಎರಡೂ ಬಡಾವಣೆಗಳ ನಿವಾಸಿಗಳಿಂದ ವಿವಿಧ ಸಮಸ್ಯೆಗಳನ್ನು ಆಲಿಸಿದ ಸಚಿವರು, ಅವುಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದರು.
ಕಾಮಗಾರಿಗಳ ಪ್ರಗತಿ ಪರಿಶೀಲನೆ ಬಳಿಕ ಉಪ್ಪಾರ ಸಮುದಾಯ ಭವನದ ಕಾಮಗಾರಿ ಹಾಗೂ ವಿ.ಸಿ.ಹೊಸೂರು ಗ್ರಾಮದಲ್ಲಿ ಕಾಮಗಾರಿ ನಡೆಯುತ್ತಿರುವ ಚೆಂಗೂರು ಮಾರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಪುಟ್ಟರಂಗಶೆಟ್ಟಿ ಅವರು, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ಈ ವೇಳೆ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಸಚಿವರು, ದೇವಸ್ಥಾನದಲ್ಲಿ ಇನ್ನೂ ಅಗತ್ಯವಿರುವ ಹೆಚ್ಚುವರಿ ಕಾಮಗಾರಿಗಳನ್ನು ಸಹ ಮಾಡಿಸಿಕೊಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ನಲ್ಲೂರು ಸೋಮೇಶ್ವರ್, ಎಪಿಎಂಸಿ ಸದಸ್ಯ ಸೋಮೇಶ್ವರ್, ಮುಖಂಡರಾದ ಸೋಮಣ್ಣ, ರಂಗಸ್ವಾಮಿ, ಶಿವಮಲ್ಲು, ನಾಗರಾಜು, ಪ್ರಜ್ವಲ್, ರವಿಕಿರಣ್, ಮಹೇಶ್ ಚಿಕ್ಕಮೋಳೆ, ಮುರುಗೇಶ್ ಇತರರು ಇದ್ದರು.