ಹನೂರಿನಲ್ಲಿ ಬಿಇಒ ಮಹೇಶ್ ಅಧ್ಯಕ್ಷತೆಯಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ ನಡೆಯಿತು. ಕಾಂತರಾಜು, ಕೆಂಪರಾಜು, ಅಶೋಕ್, ಮಹೇಶ್ ಇತರರಿದ್ದರು.  
ಚಾಮರಾಜನಗರ

ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕೆ ಎಲ್ಲರ ಸಹಕಾರ ಕಾರಣ

ಎಂ.ರವಿ

ಹನೂರು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಅಭಿನಂದನೆ

ಹನೂರು: ಈ ಬಾರಿ ಹನೂರು ಶೈಕ್ಷಣಿಕ ವಲಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಪಡೆಯುವುದಕ್ಕೆ ನಿಮ್ಮೆಲ್ಲರ ಸಹಕಾರವೇ ಕಾರಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ತಿಳಿಸಿದರು.
ಪಟ್ಟಣದ ಬಿಆರ್‌ಸಿ ಸಭಾಂಗಣದಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ 2ರ ಸಂಬಂಧ ಆಯೋಜಿಸಿದ್ದ ಪ್ರೌಢಶಾಲಾ ಮುಖ್ಯಶಿಕ್ಷಕರ ಸಭೆಯಲ್ಲಿ ಮಾತನಾಡಿದರು.
ಹನೂರು ಶೈಕ್ಷಣಿಕ ವಲಯ ಕಳೆದ 2 ವರ್ಷದಿಂದಲೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿಯೇ ಕೊನೆಯ ಸ್ಥಾನ ಪಡೆಯುತ್ತಿದ್ದು, ಹಿನ್ನಡೆಗೆ ಕಾರಣವಾಗಿತ್ತು. ಇದನ್ನು ಮನಗಂಡು ಫಲಿತಾಂಶವನ್ನು ಉತ್ತಮಪಡಿಸುವ ಸಲುವಾಗಿ ಶಾಸಕರ ಮಾರ್ಗದರ್ಶನದಲ್ಲಿ ಭರವಸೆಯ ಬೆಳಕು ವಿನೂತನವನ್ನು ಕಾರ್ಯಕ್ರಮವನ್ನು ಕೈಗೊಳ್ಳುವುದರ ಮೂಲಕ ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನವನ್ನು ನೀಡಲಾಗಿತ್ತು. ಜತೆಗೆ ಸರ್ಕಾರದ 29 ಅಂಶಗಳ ಕಾರ್ಯಕ್ರಮ, ವಿಶೇಷ ಹಾಗೂ ರಾತ್ರಿ ತರಗತಿ, ವಿದ್ಯಾರ್ಥಿ ಮನೆ, ಹಾಸ್ಟೆಲ್‌ಗಳಿಗೆ ಭೇಟಿ ಹಾಗೂ ಇನ್ನಿತರ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದರ ಸಮರ್ಪಕ ಅನುಷ್ಠಾನದಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರ ಶ್ರಮ ಅಪಾರ. ಇದರ ಫಲ ಎಸ್ಸೆಸ್ಸೆಲ್ಸಿಯಲ್ಲಿ ಈ ಬಾರಿ ಶೈಕ್ಷಣಿಕ ವಲಯ ಜಿಲ್ಲೆಯಲ್ಲಿ 2ನೇ ಸ್ಥಾನವನ್ನು ಪಡೆದಿದ್ದು, ತೃಪ್ತಿಯನ್ನು ತಂದು ಕೊಟ್ಟಿದೆ. ಹಾಗಾಗಿ ಇದೇ ರೀತಿ ಉತ್ತಮವಾಗಿ ಕಾರ್ಯನಿರ್ವಹಿಸುವುದರ ಮೂಲಕ ಈ ಶೈಕ್ಷಣಿಕ ಸಾಲಿನಲ್ಲೂ ಉತ್ತಮ ಫಲಿತಾಂಶ ಪಡೆಯುವುದರತ್ತ ಕಾರ್ಯೋನ್ಮುಖರಾಗಬೇಕು. ಹಾಗೆಯೇ ಮೇ 18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ 2 ಆರಂಭವಾಗಲಿದ್ದು, ವಲಯದಲ್ಲಿ ಅನುತ್ತೀರ್ಣರಾಗಿರುವ 84 ವಿದ್ಯಾರ್ಥಿಗಳು ಪಾಸಾಗಲು ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.
ಇನ್ನು ಮೇ 15ರಂದು ಶಾಸಕರ ಅಧ್ಯಕ್ಷತೆಯಲ್ಲಿ ಪಟ್ಟಣದ ಶ್ರೀ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಶೈಕ್ಷಣಿಕ ವಲಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಯ ಮುಖ್ಯಶಿಕ್ಷಕರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರ ಸಭೆಯನ್ನು ಆಯೋಜಿಸಲಾಗಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಹಾಜರಾಗುವಂತೆ ತಿಳಿಸಿದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕೆಂಪರಾಜು, ಶಿಕ್ಷಣ ಸಂಯೋಜಕರಾದ ಅಶೋಕ್, ರವೀಂದ್ರ, ಮಹೇಶ್, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಕಾರ್ಯದರ್ಶಿ ಕಾಂತರಾಜು ಹಾಗೂ ಇನ್ನಿತರರು ಇದ್ದರು.