ಬಟಗುಪ್ಪೆಯಲ್ಲಿನ ಬರಹಳ್ಳದಲ್ಲಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಆರ್ ಮಂಜುನಾಥ್ ಭೂಮಿಪೂಜೆ ನೆರವೇರಿಸಿದರು. ಮಂಜೇಶ್, ರಾಜುಗೌಡ, ವಿಜಯಕುಮಾರ್ ಮತ್ತಿತರರಿದ್ದರು.  
ಚಾಮರಾಜನಗರ

ತಿಂಗಳಾಂತ್ಯಕ್ಕೆ ಪೈಪ್‌ಲೈನ್ ಕಾಮಗಾರಿಗೆ ಭೂಮಿಪೂಜೆ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಂ.ಆರ್.ಮಂಜುನಾಥ್ ಮಾಹಿತಿ
ಹನೂರು: ಉದ್ದನೂರು ಬಳಿಯ ಹುಬ್ಬೆಹುಣಸೆ ಕೆರೆಗೆ ನದಿ ಮೂಲದಿಂದ ನೀರು ತುಂಬಿಸುವ ಯೋಜನೆಯ ಪೈಪ್‌ಲೈನ್ ಕಾಮಗಾರಿಗೆ ತಿಂಗಳ ಅಂತ್ಯದೊಳಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಪಟ್ಟಣ ಸಮೀಪದ ಬಟಗುಪ್ಪೆಯಲ್ಲಿನ ಬರಹಳ್ಳದಲ್ಲಿ ಶನಿವಾರ 43 ಲಕ್ಷ ರೂ. ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಹನೂರು ಸುತ್ತಮುತ್ತ ಹೆಚ್ಚಿನ ರೈತರು ಕೃಷಿ ಮಾಡುತ್ತಿದ್ದಾರೆ. ಆದರೆ ಮಳೆಗಾಲದ ವೇಳೆ ನೀರು ವ್ಯರ್ಥವಾಗಿ ಹರಿಯುತ್ತಿದ್ದ ಕಾರಣ ಪ್ರಯೋಜನಕ್ಕೆ ಬಾರದಂತಾಗಿತ್ತು. ಈ ದಿಸೆಯಲ್ಲಿ ಈ ಭಾಗದ ರೈತರು ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಿಸಿ ಕೃಷಿಗೆ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದ್ದರು. ಈ ಸಂಬಂಧ ದೊಡ್ಡ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಅನುದಾನ ದೊರಕಲಿಲ್ಲ. ಈ ಬಗ್ಗೆ ಅಗತ್ಯ ಕ್ರಮವಹಿಸಲಾಗಿತ್ತು. ಇದೀಗ ಮುಖ್ಯಮಂತ್ರಿ ವಿಶೇಷ ಅನುದಾನದಡಿ 43 ಲಕ್ಷ ರೂ. ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಹೆಚ್ಚು ನೀರು ಸಂಗ್ರಹಣೆಯಾಗುವುದರ ಮೂಲಕ ಅಂತರ್ಜಲ ಮಟ್ಟ ಹೆಚ್ಚಳವಾಗಲಿದ್ದು, ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ರೈತರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಹುಬ್ಬೆಹುಣಸೆ ಕೆರೆಗೆ ನದಿ ಮೂಲದಿಂದ ನೀರು ತುಂಬಿಸುವ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, 20 ಕೋಟಿ ರೂ. ವೆಚ್ಚದಲ್ಲಿ ಪೈಪ್‌ಲೈನ್ ಕಾಮಗಾರಿ ಕೈಗೊಳ್ಳುವ ಪ್ರಕ್ರಿಯೆ ಟೆಂಡರ್ ಹಂತದಲ್ಲಿದೆ. ಹಾಗಾಗಿ ಈ ತಿಂಗಳ ಅಂತ್ಯದೊಳಗೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುವುದು. ಈ ಕೆರೆಯಲ್ಲಿ ಹೆಚ್ಚು ನೀರು ಸಂಗ್ರಹವಾಗುವ ನಿಟ್ಟಿನಲ್ಲಿ ಬಂಡ್ ನಿರ್ಮಾಣ ಮಾಡಲು ಅಗತ್ಯ ಕ್ರಮವಹಿಸಲಾಗಿದ್ದು, ರೈತರು ಅಗತ್ಯವಿದ್ದಲ್ಲಿ ಉಚಿತವಾಗಿ ಮಣ್ಣನ್ನು ತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ. ಇನ್ನು ಹನೂರು ಭಾಗದ ಜನತೆ ರಾಮನಗುಡ್ಡೆ ಹಾಗೂ ಹುಬ್ಬೆಹುಣಸೆ ಕೆರೆಯ ಪ್ರಕೃತಿ ಸೌಂದರ್ಯವನ್ನು ಸವಿಯಲು ಉದ್ಯಾನವನ ನಿರ್ಮಿಸಲು ಉದ್ದೇಶಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕಾರ್ಯರೂಪಗೊಳಿಸಲು ಅಗತ್ಯ ಕ್ರಮವಹಿಸಲಾಗಿದೆ ಎಂದರು.
ಹನೂರು ಪಿಎಸಿಸಿ ನಿರ್ದೇಶಕ ಮಂಜೇಶ್, ಮುಖಂಡರಾದ ರಾಜುಗೌಡ, ವಿಜಯಕುಮಾರ್, ಲೋಕೇಶ್, ರಾಜು, ರವಿ, ಸಿದ್ದರಾಜು, ನಟರಾಜು, ತಿರುಪತಿ, ರಾಜಾರಾಮ್ ಇತರರಿದ್ದರು.