ಹನೂರಿನಲ್ಲಿ ಆಯೋಜಿಸಿದ್ಧ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ರಾಚಯ್ಯ, ಪ್ರತಿಭಾ, ರೇಖಾ, ರವೀಂದ್ರ ಇತರರಿದ್ದರು.  
ಚಾಮರಾಜನಗರ

ಸಾಮಾಜಿಕ ಪಿಡುಗುಗಳು ದೂರವಾಗಬೇಕು

ಎ. ಆರ್. ರಘುರಾಮ
ಹನೂರು : ಪ್ರಜಾಪ್ರಭುತ್ವದ ಆಶಯವನ್ನು ಮನದಟ್ಟು ಮಾಡಿಕೊಂಡು ಇದರ ಯಶಸ್ಸಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಕೊಳ್ಳೇಗಾಲ ಎಸ್‌ವಿಕೆ ಕಾಲೇಜಿನ ಉಪನ್ಯಾಸಕ ದೊರೆಸ್ವಾಮಿ ತಿಳಿಸಿದರು.
ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಸಮುದಾಯ ಭವನದಲ್ಲಿ ಮಂಗಳವಾರ ತಾಲೂಕು ಆಡಳಿತ, ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ಧ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಜಾಪ್ರಭುತ್ವದ ವ್ಯವಸ್ಥೆ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸಿದೆ. ಹಾಗಾಗಿ ವಿಶ್ವದಲ್ಲಿ ಸುಮಾರು 150ಕ್ಕೂ ಹೆಚ್ಚು ದೇಶಗಳು ಈ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸಲು ವಿಶ್ವಸಂಸ್ಥೆಯು 2007ರಿಂದ ಈ ದಿನಾಚರಣೆಯನ್ನು ಘೋಷಿಸಿದೆ. ಪ್ರಜಾಪ್ರಭುತ್ವದ ಸ್ಥಿತಿಗತಿಯನ್ನು ಅವಲೋಕಿಸುವುದು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ ಎಂದರು.
ಪ್ರಜಾಪ್ರಭುತ್ವದ ಉದ್ದೇಶ ಈಡೇರಬೇಕು ಎಂದರೆ ಸಾಮಾಜಿಕ ಪಿಡುಗುಗಳು ದೂರವಾಗಬೇಕು.
ಜಾತೀಯತೆ, ಅಸಮಾನತೆ, ಶೋಷಣೆ ತಪ್ಪಬೇಕು. ಆದ್ದರಿಂದ ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿದು ಇದರ ಯಶಸ್ಸಿಗೆ ಕಂಕಣ ಬದ್ಧರಾಗಬೇಕು. ಹೀಗಾಗಾಗ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ತಿಳಿಸಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಾಳ್ಯ ರಾಚಯ್ಯ ಮಾತನಾಡಿದರು. ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು. ಬಿಇಒ ಪ್ರತಿಭಾ, ಗ್ರೇಡ್ 2 ತಹಸೀಲ್ದಾರ್ ಪ್ರಕಾಶ್, ಪಪಂ ಮುಖ್ಯಾಧಿಕಾರಿ ರೇಖಾ, ಗೌತಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವೀಂದ್ರ, ಶಿಕ್ಷಣ ಸಂಯೋಜಕರಾದ ಅಶೋಕ್, ಮಹೇಶ್, ಚಿನ್ನಪ್ಪಯ್ಯ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಶೇಖರ್, ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ವಿಜಯಕುಮಾರ್, ವಿವಿಧ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಇನ್ನಿತರರು ಇದ್ದರು.