ಯಳಂದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಯರಿಯೂರು ಗ್ರಾಮದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ತಮ್ಮ ಕಾರಿನಲ್ಲಿ ಕರೆತಂದು ಚಿಕಿತ್ಸೆ ಕೊಡಿಸುತ್ತಿರುವುದು
ಯಳಂದೂರು: ತಾಲೂಕಿನ ಯರಿಯೂರು ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಬೈಕ್‌ಗಳ ಮುಖಾಮುಖಿ ಡಿಕ್ಕಿಯಿಂದ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವ ಮೂಲಕ ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾನವೀಯತೆ ಮೆರೆದಿದ್ದಾರೆ.
ಇರಸವಾಡಿ ಗ್ರಾಮದ ಸಚಿನ್ ಹಾಗೂ ಯರಿಯೂರು ಗ್ರಾಮದ ಶ್ರೀಕಂಠಮೂರ್ತಿ ಎಂಬುವರು ಯರಿಯೂರು ಗ್ರಾಮದಿಂದ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 948 ರಲ್ಲಿ ತಮ್ಮ ಬೈಕ್‌ನಲ್ಲಿ ಸಾಗುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿಯಾಗಿದ್ದಾರೆ. ಈ ವೇಳೆ ಬೆಂಗಳೂರಿನಿಂದ ಅಧಿವೇಶನವನ್ನು ಮುಗಿಸಿ ಯಳಂದೂರು ತಾಲೂಕಿನ ಉಪ್ಪಿನಮೋಳೆ ಗ್ರಾಮಕ್ಕೆ ತೆರಳುತ್ತಿದ್ದ ಶಾಸಕ ಸಿ. ಪುಟ್ಟರಂಗಶೆಟ್ಟಿ ಕಾರು ಅಪಘಾತ ಸ್ಥಳಕ್ಕೆ ಬಂದಿದೆ. ಇರಸವಾಡಿ ಗ್ರಾಮದ ಸಚಿನ್‌ಗೆ ತಲೆಗೆ ಪೆಟ್ಟಾಗಿದ್ದರಿಂದ ಶಾಸಕರು ಈತನನ್ನು ಮತ್ತು ಯರಿಯೂರು ಗ್ರಾಮದ ಶ್ರೀಕಂಠಮೂರ್ತಿ ಅವರನ್ನು
ಯಳಂದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಮ್ಮ ಕಾರಿನಲ್ಲೇ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಈತನನ್ನು ಆಂಬುಲೆನ್ಸ್‌ನಲ್ಲಿ ಚಾಮರಾಜನಗರದ ಸಿಮ್ಸ್‌ಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಿದ್ದಾರೆ.