ಹನೂರು: ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿಯಾದರೆ ರಾಜ್ಯ ಸುಭಿಕ್ಷವಾಗಿರಲಿದೆ ಎಂದು ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಳೆದ ಮೂವರೆ ವರ್ಷದಿಂದ ಆಡಳಿತ ನಡೆಸುತ್ತಿದೆ. ಆದರೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಇದರಿಂದ ಜನರು ಬೇಸತ್ತಿದ್ದಾರೆ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ತೊಲಗಿಸಿ ಯಡಿಯೂರಪ್ಪ ಅವರ ಮಾಗದರ್ಶನದಲ್ಲಿ ಬಿ.ವೈ.ವಿಜಯೇಂದ್ರ ಅವರನ್ನು ಮುಖ್ಯಮಂತ್ರಿಯಾಗಿಸಲು ಪಣ ತೊಟ್ಟಿದ್ದೇವೆ. ಈ ದಿಸೆಯಲ್ಲಿ ಬೆಂಗಳೂರಿನಿಂದ ಮ.ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಆಗಮಿಸಿದ್ದು, ಮಾದಪ್ಪನಿಗೆ ಪೂಜೆ ಸಲ್ಲಿಸಿದ್ದೇವೆ. ಇನ್ನು ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಇವರು ಮುಖ್ಯಮಂತ್ರಿಯಾದರೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯಲಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹಿರಿಯ ಮುಖಂಡ ಪೊನ್ನಾಚಿ ಮಹದೇವಸ್ವಾಮಿ ಮಾತನಾಡಿ, ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಹಲವು ಯೋಜನೆಯನ್ನು ಜಾರಿಗೊಳಿಸುವುದರ ಮೂಲಕ ಉತ್ತಮ ಆಡಳಿತ ನೀಡಿದ್ದಾರೆ. ಇವರ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿದೆ. ವಿಜಯೇಂದ್ರ ಅವರು ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ವೀರಾಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ನಕೂಡು ನಂದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಜತ್ತಿ, ಮ.ಬೆಟ್ಟ ಮಂಡಲಾಧ್ಯಕ್ಷ ಮುರುಗೇಶ್ ಹಾಗೂ ಇನ್ನಿತರರಿದ್ದರು.