ಚಾಮರಾಜನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉದ್ಯೋಗ ಮೇಳದಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸಂಸದ ಸುನೀಲ್‌ಬೋಸ್ ಉದ್ಯೋಗ ನೇಮಕ ಪತ್ರ ವಿತರಿಸಿದರು. ಡಿಸಿ ಶ್ರೀರೂಪಾ, ಜಿಪಂ ಸಿಇಒ ಮೋನಾ ರೋತ್, ಎಚ್.ವಿ.ಚಂದ್ರು, ಮಹಮ್ಮದ್ ಅಸ್ಗರ್ ಮುನ್ನಾ, ಟಿ. ಜವರೇಗೌಡ, ಎಂ.ಎನ್. ಶಶಿಧರ್, ಉಪವಿಭಾಗಾಧಿಕಾರಿ ದಿನೇಶ್ ಇದ್ದರು. 
ಚಾಮರಾಜನಗರ

ಆಯ್ಕೆಯಾದವರಿಗೆ ನೇಮಕಾತಿ ಪತ್ರ ವಿತರಣೆ

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಮಟ್ಟದ ಉದ್ಯೋಗ ಮೇಳ
  • 193 ಜನರಿಗೆ ಜಾಬ್
ಚಾಮರಾಜನಗರ: ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಲೋಕಸಭಾ ಸದಸ್ಯ ಸುನೀಲ್ ಬೋಸ್ ಅವರು ಉದ್ಯೋಗ ನೇಮಕಾತಿ ಪತ್ರ ವಿತರಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಸ್ಥಳದಲ್ಲಿಯೇ ಉದ್ಯೋಗಕ್ಕೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಶುಕ್ರವಾರ ಉದ್ಯೋಗ ನೇಮಕ ಪತ್ರ ವಿತರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಂಜೀವಿನಿ-ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಇನ್ನಿತರ ಇಲಾಖೆ, ನಿಗಮ ಆಶ್ರಯದಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆಯಡಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿತ್ತು. ಉದ್ಯೋಗ ಮೇಳಕ್ಕೆ ಆನ್‌ಲೈನ್‌ನಲ್ಲಿ 668, ಆಫ್‌ಲೈನ್‌ನಲ್ಲಿ 602 ಅಭ್ಯರ್ಥಿಗಳು ಸೇರಿದಂತೆ ಒಟ್ಟು 1290 ಅಭ್ಯರ್ಥಿಗಳು ನೊಂದಣಿಯಾಗಿದ್ದರು. ಇವರಲ್ಲಿ 495 ಯುವಕರು, 790 ಯುವತಿಯರು ಸೇರಿದ್ದಾರೆ. ಉದ್ಯೋಗ ಮೇಳದಲ್ಲಿ 101 ಉದ್ಯೋಗದಾತ ಕಂಪನಿಗಳು ಭಾಗವಹಿಸಿದ್ದವು. 85 ಪುರುಷರು, 108 ಮಹಿಳೆಯರು ಸೇರಿದಂತೆ ಒಟ್ಟು 193 ಅಭ್ಯರ್ಥಿಗಳು ಸ್ಥಳದಲ್ಲಿಯೇ ಉದ್ಯೋಗಕ್ಕೆ ಆಯ್ಕೆಯಾಗಿದ್ದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರುತಿ ಡಿ.ಸಿ, ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಸೋಮೇಶ್ವರ ಇತರರಿದ್ದರು.
ಉದ್ಯೋಗ ಮೇಳ ಸದ್ಭಳಕೆಯಾಗಲಿ:
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸ್ಥಳೀಯ ನಿರುದ್ಯೋಗಿ ಯುವಜನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂಬ ಉದ್ದೇಶದಿಂದ ಆಯೋಜಿಸಲಾಗುವ ಉದ್ಯೋಗ ಮೇಳದಂತಹ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಪ್ರತಿಯೊಬ್ಬರು ಸರ್ಕಾರಿ ಉದ್ಯೋಗ ಪಡೆಯಲು ಸಾಧ್ಯವಾಗುವುದಿಲ್ಲ. ಖಾಸಗಿ ಕ್ಷೇತ್ರಗಳಲ್ಲೂ ಸಾಕಷ್ಟು ಉತ್ತಮ ಉದ್ಯೋಗಗಳು ಇವೆ. ಅರ್ಹತೆಕ್ಕನುಗುಣವಾಗಿ ಉದ್ಯೋಗ ಪಡೆಯಲು ನೆರವಾಗಬೇಕೆಂಬ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಇನ್ನಿತರ ಇಲಾಖೆಗಳು ಸ್ಥಳೀಯವಾಗಿ ಉದ್ಯೋಗ ಮೇಳವನ್ನು ಏರ್ಪಡಿಸುತ್ತಿವೆ. ಇಂತಹ ಅವಕಾಶವನ್ನು ಯುವಜನರು ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಮೋನಾರೋತ್ ಮಾತನಾಡಿ, ಯುವ ಜನರಿಗೆ ಉದ್ಯೋಗ ಪಡೆಯಲು ನೆರವಾಗುವ ಉದ್ದೇಶದಿಂದ ಕಳೆದ ವರ್ಷವು ಉದ್ಯೋಗ ಮೇಳ ಆಯೋಜಿಸಲಾಗಿತ್ತು. ಅಂದಿನ ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಲಭಿಸಿತ್ತು. ಈ ಬಾರಿ 100ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿವೆ. ಕಳೆದ ಬಾರಿಗಿಂತಲೂ ಹೆಚ್ಚು ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯಲು ಎಲ್ಲ ಅನುಕೂಲಗಳನ್ನು ಕಲ್ಪಿಸಲಾಗಿದೆ ಎಂದರು.
ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನ ಮಾತನಾಡಿ, ಉದ್ಯೋಗ ಮೇಳವನ್ನು ಅಚ್ಚುಕಟ್ಟಾಗಿ ಆಯೋಜಿಸುತ್ತಾ ಬರಲಾಗುತ್ತಿದೆ. ಅರ್ಹರೆಲ್ಲರೂ ಉದ್ಯೋಗವಂತರಾಗಲು ವಿವಿಧ ಕಂಪನಿಗಳನ್ನು ಉದ್ಯೋಗ ಮೇಳದಲ್ಲಿ ಆಹ್ವಾನಿಸಿ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. ಜಿಲ್ಲೆಯ ಯುವ ಜನರು ಇಂತಹ ಉದ್ಯೋಗ ಮೇಳಗಳನ್ನು ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರುತಿ ಡಿ.ಸಿ., ಜಿಲ್ಲಾ ಉದ್ಯೋಗಾಧಿಕಾರಿ ಮಹಮ್ಮದ್ ಅಕ್ಬರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.