ಕೊಳ್ಳೇಗಾಲದ ಮಾನಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತಿಕ ಸ್ಪರ್ಧೆ ಆಯೋಜಿಸಲಾಗಿತ್ತು. ಪಿ.ಪ್ರಿಯಾಶಂಕರ್, ಎಸ್.ನಾಗರಾಜು ಇದ್ದರು. 
ಚಾಮರಾಜನಗರ

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಲಿ

ಪ್ರಮುಖ ಮುಖ್ಯಾಂಶಗಳು

  • ಎಚ್.ಎನ್.ಪುಟ್ಟಗೌರಮ್ಮ ಹೇಳಿಕೆ
ಕೊಳ್ಳೇಗಾಲ: ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಿ ಕಲೆ, ಸಾಹಿತ್ಯ, ಸಂಗೀತ, ಚಿತ್ರಕಲೆ ಅಭಿನಯ, ಬರವಣಿಗೆ ಮೊದಲಾದ ಪ್ರವೃತ್ತಿಗಳನ್ನು ರೂಢಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪ ನಿರ್ದೇಶಕಿ ಎಚ್.ಎನ್.ಪುಟ್ಟಗೌರಮ್ಮ ಹೇಳಿದರು.
ಪಟ್ಟಣದ ಮಾನಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶನಿವಾರ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತಿಕ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿದರು.
ನಮ್ಮ ನಾಡಿನ ಪರಂಪರೆಯನ್ನು ಉಳಿಸಿ ಬೆಳೆಸಬೇಕು. ಪಠ್ಯ ಚಟುವಟಿಕೆಗಳು ಮಾತ್ರವಲ್ಲದೆ ಸಹಪಠ್ಯ ಚಟುವಟಿಕೆಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಬದುಕನ್ನು ಹಸನುಗೊಳಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿಭಾಗವಾರು ಸುಮಾರು 11 ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. 45ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ವಿಜೇತರಾಗಿ ವಿಭಾಗಿಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆ ಯಾದರು. ಇದಕ್ಕೂ ಮುನ್ನ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಗಣ್ಯರು ಹಾಗೂ ವಿದ್ಯಾರ್ಥಿಗಳು ಸಂತಾಪ ಸೂಚಿಸಿದರು.
ಸರ್ಕಾರಿ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪಿ.ಪ್ರಿಯಾಶಂಕರ್, ಮಾನಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ನಾಗರಾಜು ಜಿಲ್ಲಾ ಉಪನ್ಯಾಸಕರ ಸಂಘದ ಪದಾಧಿಕಾರಿಗಳು, ಜಿಲ್ಲಾ ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳು ಇದ್ದರು.