ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ರಂಗನಾಯಕಿ ಸಮೇತ ಜಗನ್ಮೋಹನ ರಂಗನಾಥಸ್ವಾಮಿ ದೇವಾಲಯದ ಲೋಕಾರ್ಪಣೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು. 
ಚಾಮರಾಜನಗರ

ಮೇಕೆದಾಟು ಡಿಪಿಆರ್ ಶೀಘ್ರದಲ್ಲೇ ಕೇಂದ್ರಕ್ಕೆ ಸಲ್ಲಿಕೆ

ಪ್ರಮುಖ ಮುಖ್ಯಾಂಶಗಳು

  • ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ
  • ಅನುಮತಿ ಬಳಿಕ ಯೋಜನೆಗೆ ಭೂಮಿ ಪೂಜೆ
ಚಾಮರಾಜನಗರ: ಮೇಕೆದಾಟು ಯೋಜನೆಯ ಡಿಪಿಆರ್ ಅನ್ನು ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ರಂಗನಾಯಕಿ ಸಮೇತ ಜಗನ್ಮೋಹನ ರಂಗನಾಥಸ್ವಾಮಿ ದೇವಾಲಯದ ಲೋಕಾರ್ಪಣೆ ಸಮಾರಂಭಕ್ಕೆ ಗುರುವಾರ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು. ಮೇಕೆದಾಟು ಯೋಜನೆ ಡಿಪಿಆರ್ ಕೂಡ ತಯಾರಾಗಿದೆ. ಯೋಜನೆ ಕಚೇರಿಯನ್ನು ತೆರೆದಿದ್ದೇವೆ. ಮುಳುಗಡೆಯಾಗುವ ಅರಣ್ಯದ ಜಾಗಕ್ಕೆ ಪರ್ಯಾಯವಾಗಿ ಖಾಸಗಿ ಜಮೀನು ಒದಗಿಸುವ ಕಾರ್ಯ ನಡೆಯುತ್ತಿದೆ. ಶೀಘ್ರವೇ ಕೇಂದ್ರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಿದ್ದು, ಕೇಂದ್ರ ಸರ್ಕಾರ ಅನುಮತಿ ಬಂದ ಬಳಿಕ ಯೋಜನೆಯ ಭೂಮಿ ಪೂಜೆ ಮಾಡಲಾಗುವುದು ಎಂದು ತಿಳಿಸಿದರು.
ಮೇಕೆದಾಟು ಯೋಜನೆಗೆ ಆಕ್ಷೇಪ ಸಲ್ಲಿಸಲು ತಮಿಳುನಾಡಿಗೆ ಯಾವುದೇ ರೀತಿಯ ಹಕ್ಕಿಲ್ಲ, ಇದರ ಬಗ್ಗೆ ಕೇಂದ್ರ ಜಲ ಆಯೋಗ ತೀರ್ಮಾನ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಕಾವೇರಿ ವಿಚಾರದಲ್ಲಿ ತಮಿಳುನಾಡಿಗೆ 177 ಟಿಎಂಸಿ ನೀರನ್ನು ಬಿಡಲೇಬೇಕು ಎಂದು ಸ್ಪಷ್ಟ ಆದೇಶ ನೀಡಲಾಗಿದೆ. ಇದನ್ನು ಹೇಗೆ ಬಗೆಹರಿಸಬೇಕು ಎಂದು ಮುಂದಿನ ದಿನಗಳಲ್ಲಿ ಚರ್ಚೆ ಮಾಡುತ್ತೇನೆ. ಎಂದರು.
ಜಿಬಿಎ ಚುನಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಜಿಬಿಎ ಚುನಾವಣೆ ನಡೆಸುವ ಜವಾಬ್ದಾರಿ ಚುನಾವಣಾ ಆಯೋಗದ ಮೇಲಿದೆ. ಚುನಾವಣೆ ನಡೆಸಲು ಸರ್ಕಾರ ಸಂಪೂರ್ಣವಾಗಿ ಸಹಕಾರ ನೀಡಲು ಸಿದ್ಧವಾಗಿದೆ. ಸಮಯದ ಪ್ರಕಾರ ಚುನಾವಣೆ ನಡೆಯಲಿದೆ. ನಾವೆಲ್ಲ ಸಿದ್ಧತೆಯನ್ನು ಮಾಡಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕಾಲದ ತೀರ್ಮಾನ:
ನೀವು ಸಿಎಂ ಆಗುವುದು ಯಾವಾಗ ಎಂದು ಕೇಳಿದ ಪ್ರಶ್ನೆಗೆ ಅದನ್ನು ಕಾಲ ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಉತ್ತರಿಸಿದರು. ದೇಗುಲದ ಲೋಕಾರ್ಪಣೆಗೆ ಬಂದಿದ್ದ ಡಿಕೆಶಿ ಅವರೊಂದಿಗೆ ಪತ್ನಿ ಉಷಾ ಆಗಮಿಸಿದ್ದರು. ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅಪಾರ ಸಂಖ್ಯೆಯಲ್ಲಿ ನೆರೆಸಿದ್ದ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ೋಷಣೆ ಕೂಗಿದರು.