ಹನೂರು ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿದ್ಧ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯು ಅಧ್ಯಕ್ಷ ರಾಚಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಉಮೇಶ್, ಭೋಗನಾಯಕ, ಸೋಮಶೇಖರ್, ಸಿದ್ದಪ್ಪಾಜಿ ಇತರರಿದ್ದರು.  
ಚಾಮರಾಜನಗರ

ಅನ್ನಭಾಗ್ಯ ಅಕ್ಕಿ ಮಾರಾಟ ತಡೆಗೆ ನಿಗಾ ವಹಿಸಿ

ಪ್ರಮುಖ ಮುಖ್ಯಾಂಶಗಳು

  • ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪಾಳ್ಯ ರಾಚಯ್ಯ ಸೂಚನೆ
ಹನೂರು : ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದಿನಸಿ ಅಂಗಡಿಗಳಲ್ಲಿ ಪಡಿತರ ಅಕ್ಕಿ ಮಾರಾಟವಾಗುತ್ತಿರುವ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪಾಳ್ಯ ರಾಚಯ್ಯ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಆಯೋಜಿಸಿದ್ದ ಸದಸ್ಯರು ಹಾಗೂ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಮ.ಬೆಟ್ಟ ಧಾರ್ಮಿಕ ಪುಣ್ಯ ಸ್ಥಳ. ಹಾಗಾಗಿ ಇಲ್ಲಿಗೆ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಹರಕೆ ಸೇವೆಗಳನ್ನು ಸಲ್ಲಿಸುತ್ತಾರೆ. ಆದರೆ ಇತ್ತೀಚೆಗೆ ಕನಕಪುರದ ಭಕ್ತರು ದಾಸೋಹ ಭವನಕ್ಕೆ ನೀಡಲು ಮ.ಬೆಟ್ಟದ ದಿನಸಿ ಅಂಗಡಿಯೊಂದರಲ್ಲಿ ಖರೀದಿಸಿದ ಅಕ್ಕಿ ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರ ಅಕ್ಕಿಯಾಗಿದ್ದು, ಈ ಬಗ್ಗೆ ಭಕ್ತರು ಹಾಗೂ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆದ್ದರಿಂದ ಮ.ಬೆಟ್ಟದ ಅಂಗಡಿಗಳಲ್ಲಿ ಈ ಬಗ್ಗೆ ಪರಿಶೀಲನೆಯಾಗಬೇಕು. ಒಂದು ವೇಳೆ ಪಡಿತರ ಅಕ್ಕಿಯನ್ನು ಮಾರಾಟ ಮಾಡಿದ್ದೇ ಆದಲ್ಲಿ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಸೂಚಿಸಿದರು. ಇದಕ್ಕೆ ತಾಲೂಕು ಆಹಾರ ಶಿರಸ್ತೇದಾರ್ ವಿಷ್ಣುಕುಮಾರ್ ಪ್ರತಿಕ್ರಿಯಿಸಿ, ಮ.ಬೆಟ್ಟದಲ್ಲಿ ಪಡಿತರ ಅಕ್ಕಿ ಮಾರಾಟ ಸಂಬಂಧ ಈಗಾಗಲೇ ಪರಿಶೀಲನೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲೂ ಈ ಬಗ್ಗೆ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.
ತಾಲೂಕಿಗೆ ಕಾಯಂ ಆಹಾರ ಶಿರಸ್ತೇದಾರ್ ಇಲ್ಲದ ಪರಿಣಾಮ ನ್ಯಾಯ ಬೆಲೆ ಅಂಗಡಿಗಳಲ್ಲಿ ಹಲವು ಅಕ್ರಮಗಳಿಗೆ ಎಡೆಮಾಡಿಕೊಟ್ಟಿದೆ. ಇದರಿಂದ ಜನರು ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ. ಆದ್ದರಿಂದ ಕಾಯಂ ಶಿರಸ್ತೇದಾರ್ ನೇಮಕ ಸಂಬಂಧ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮವಹಿಸುವಂತೆ ತಾಪಂ ಇಒ ಉಮೇಶ್ ಅವರಿಗೆ ಸೂಚಿಸಲಾಯಿತು.
ತಾಲೂಕಿನ ಕೆಲವು ಕಡೆಗಳಲ್ಲಿ ಮನೆ ಯಜಮಾನಿ ಮೃತಪಟ್ಟಿದ್ದರೂ ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಸಂದಾಯವಾಗುತ್ತಿರುವ ಹಣವನ್ನು ಬೇರೆಯವರು ಎಟಿಎಂ ಕಾರ್ಡ್ ಮೂಲಕ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ಗ್ರಾಮಗಳಲ್ಲಿ ಮೃತಪಟ್ಟವರ ಕುಟುಂಬಸ್ಥರ ಮಾಹಿತಿ ಪಡೆದು ಹಣ ದುರುಪಯೋಗಕ್ಕೆ ಕಡಿವಾಣ ಹಾಕುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶಿವಲೀಲಾ ಅವರಿಗೆ ಸೂಚಿಸಲಾಯಿತು.
ಇದೇ ವೇಳೆ ಶಕ್ತಿ ಯೋಜನೆ, ಗೃಹಜ್ಯೋತಿ ಹಾಗೂ ಯುವನಿಧಿಯ ಬಗ್ಗೆ ಚರ್ಚಿಸಲಾಯಿತು. ಅನುಪಾಲನಾ ವರದಿಯನ್ನು ಪಡೆದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಾರಿಗೆ ಡಿಪೋ ವ್ಯವಸ್ಥಾಪಕ ಭೋಗನಾಯಕ, ಸೆಸ್ಕ್ ಎಇಇ ರಂಗಸ್ವಾಮಿ, ಉದ್ಯೋಗ ವಿನಿಮಯ ಕಚೇರಿಯ ಯಶವಂತ್, ಗ್ಯಾರಂಟಿ ಸಮಿತಿ ಸದಸ್ಯರಾದ ಸೋಮಶೇಖರ್, ಮುಷೀರ್ ಆಹಮದ್, ಗೋವಿಂದ, ಸಿದ್ದಪ್ಪಾಜಿ, ನಾಗೇಶ್ ಹಾಗೂ ಇನ್ನಿತರರು ಇದ್ದರು.