ಚಾಮರಾಜನಗರದ ವಿಶ್ವ ವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬಿ.ಹನುಮಯ್ಯ ಅವರನ್ನು ಸನ್ಮಾನಿಸಲಾಯಿತು. ಪ್ರೊ.ಎಂ.ಆರ್.ಗಂಗಾಧರ್, ಡಾ.ಎಚ್.ಕೃಷ್ಣರಾಮ್, ಪ್ರೊ.ಕೆ.ಎಂ.ಮಹಾದೇವನ್, ಪುಟ್ಟಸ್ವಾಮಿ, ಡಾ.ಕೆ.ಸಿ.ಬಸವಣ್ಣ, ನಾಗೇಶ್, ಪ್ರೊ.ದಿವ್ಯಾ ಇತರರಿದ್ದರು. 
ಚಾಮರಾಜನಗರ

ಸಂವಿಧಾನ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ

ಕೆಂಡಗಣ್ಣ ಎನ್

ಪ್ರಮುಖ ಮುಖ್ಯಾಂಶಗಳು

  • Constitution
ಚಾಮರಾಜನಗರ: ಸಂವಿಧಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಕುರಿತು ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನ ಮಾಡುವುದು ಅಗತ್ಯವಾಗಿದೆ ಎಂದು ಲಕ್ನೋ ವಿವಿ ವಿಶ್ರಾಂತ ಕುಲಪತಿ ಪ್ರೊ.ಬಿ.ಹನುಮಯ್ಯ ಸಲಹೆ ನೀಡಿದರು.
ನಗರದ ಹೊರವಲಯದಲ್ಲಿರುವ ಚಾಮರಾಜನಗರ ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ತೃತೀಯ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಹಲವು ಹಕ್ಕು-ಅಧಿಕಾರಿಗಳನ್ನು ಕಲ್ಪಿಸಿಕೊಟ್ಟರು. ಮಹಿಳೆಯರಿಗೆ ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟಿದ್ದಾರೆ. ಈ ಮೂಲಕ ಕೋಟ್ಯಾಂತರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಮೂಲಕ ಬದುಕು ರೂಪಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಕುರಿತು ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನ ಮಾಡಬೇಕಿದೆ ಎಂದರು.
ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಮಾತನಾಡಿ, ಗಡಿ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಅನುಕೂಲವಾಗಿದೆ. ಕಳೆದ ಮೂರು ವರ್ಷಗಳಿಂದ ನೂರಾರು ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಚಿನ್ನದ ಪದಕ ಗಳಿಸಿ ವಿವಿಗೆ ಕೀರ್ತಿ ತಂದಿದ್ದಾರೆ. ನುರಿತ ಪ್ರಾಧ್ಯಾಪಕರ ಮಾರ್ಗದರ್ಶನದಿಂದ ಶಿಕ್ಷಣ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಶ್ಲಾಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಡಾ.ಎಚ್.ಕೃಷ್ಣರಾಮ್, ಚಾಮರಾಜನಗರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಕೆ.ಎಂ.ಮಹಾದೇವನ್, ಸಿಂಡಿಕೇಟ್ ಸದಸ್ಯ ಪುಟ್ಟಸ್ವಾಮಿ, ಡೀನ್ ಡಾ.ಕೆ.ಸಿ.ಬಸವಣ್ಣ, ವಿಶ್ರಾಂತ ಹಣಕಾಸು ಅಧಿಕಾರಿ ನಾಗೇಶ್, ಪ್ರೊ.ದಿವ್ಯಾ, ಹಾಜಿರಾ, ಶ್ವೇತಾ, ಕ್ರೀಡೆ ಸಮಿತಿ ಸದಸ್ಯ ಜಿ.ಬಂಗಾರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ಆರ್.ಎಸ್.ಅಶ್ವಿನಿ ಹಾಗೂ ಇತರರು ಹಾಜರಿದ್ದರು.