ಗುಂಡ್ಲುಪೇಟೆ ತಾಲೂಕಿನ ರಾಘವಾಪುರ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಭೂಮಿಪೂಜೆ ನೆರವೇರಿಸಿದರು. ಎಚ್.ಎಸ್.ನಂಜುಂಡಪ್ರಸಾದ್, ನಾಗೇಶ್, ಎಚ್.ಎಸ್.ನಂಜಪ್ಪ ಇತರರು ಇದ್ದರು.
ಗುಂಡ್ಲುಪೇಟೆ: ಗ್ರಾಮ ಪಂಚಾಯಿತಿ ಕೇಂದ್ರವಾದ ರಾಘವಾಪುರದಲ್ಲಿ ಹೆಚ್ಚಿನ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಹೇಳಿದರು.
ತಾಲೂಕಿನ ರಾಘವಾಪುರ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಸ್ತೆ ಮತ್ತು ಚರಂಡಿ ನಿರ್ಮಿಸುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಮಾಡಲಾಗುತ್ತಿದೆ. ನೈರ್ಮಲ್ಯದ ದೃಷ್ಟಿಯಿಂದಲೂ ರಸ್ತೆ ಮತ್ತು ಚರಂಡಿ ನಿರ್ಮಾಣ ಮಹತ್ವದ್ದಾಗಿದೆ. ಗ್ರಾಮಸ್ಥರು ಒಗ್ಗಟ್ಟಿನಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಸಹಕಾರ ನೀಡಬೇಕು. ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಿಡುಗಡೆಯಾದ ಬಳಿಕ ತಾಲೂಕು ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ತಿಳಿಸಿದರು.
ನಂತರ ತಾಲೂಕಿನ ಭೀಮನಬೀಡು, ಬೇರಂಬಾಡಿ, ಕಣ್ಣೇಗಾಲ ಹಾಗೂ ಹಂಗಳ ಗ್ರಾಮಗಳಲ್ಲಿ ಗಿರಿಜನ ಉಪಯೋಜನೆಯಡಿ ತಲಾ 25 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಚರಂಡಿ ಕಾಮಗಾರಿಗಳು, ಹುಂಡೀಪುರ ಗ್ರಾಮದಲ್ಲಿ ಕುಡಿಯುವ ನೀರಿನ ಓವರ್‌ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಾಸರು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಹಾಪ್‌ಕಾಮ್ಸ್ ಅಧ್ಯಕ್ಷ ನಾಗೇಶ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಆರ್.ಡಿ.ಉಲ್ಲಾಸ್, ಆರ್.ಎಸ್.ಗೋವಿಂದರಾಜು, ಶಿವರಾಜು, ಸುಧಾಮಣಿ ಇದ್ದರು.