ಹನೂರು ತಾಲೂಕಿನ ಮೇಗಲ ದಂಟಳ್ಳಿಯಲ್ಲಿ ಬೋರ್ ಕೊರೆಯಲು ತಡೆಯೊಡ್ಡಿದ್ದಕ್ಕೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದರು.
ಮೇಗಲ ದಂಟಳ್ಳಿ ಗ್ರಾಮಸ್ಥರಿಂದ ಪ್ರತಿಭಟನೆ
ಹನೂರು: ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮ ಮೇಗಲ ದಂಟಳ್ಳಿಯಲ್ಲಿ ಶುಕ್ರವಾರ ಬೋರ್ ಕೊರೆಯಲು ಅರಣ್ಯ ಇಲಾಖೆಯವರು ತಡೆಯೊಡ್ಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಇತ್ತೀಚೆಗೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ತಲೆದೋರಿತ್ತು. ಈ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಗ್ರಾಮದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಸ್ಥಳದಲ್ಲಿ ಬೆಳಗ್ಗೆ ಬೋರ್ ಕೊರೆಸಲಾಗುತ್ತಿತ್ತು. ಈ ಬಗ್ಗೆ ತಿಳಿದು ಅರಣ್ಯ ಇಲಾಖೆಯ ಸಿಬ್ಬಂದಿ ಈ ಸ್ಥಳವು ಅರಣ್ಯ ಇಲಾಖೆಗೆ ಸೇರಿದ್ದು, ಬೋರ್ ಕೊರೆಸಲು ಅವಕಾಶ ನೀಡುವುದಿಲ್ಲ ಎಂದು ತಡೆಯೊಡ್ಡಿದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಬೋರ್ ಕೊರೆಯುತ್ತಿದ್ದ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಗ್ರಾಮಸ್ಥರು ಮಾತನಾಡಿ, ಕುಡಿಯುವ ನೀರಿಗಾಗಿ ತುಂಬ ತೊಂದರೆಯನ್ನು ಅನುಭವಿಸುತ್ತಿದ್ದು, ಪಡುಬಾರದ ಕಷ್ಟ ಪಡುತ್ತಿದ್ದೇವೆ. ಹಾಗಾಗಿ ಬೋರ್ ಕೊರೆಯಲಾಗುತ್ತಿದೆ. ಅಂತಹದರಲ್ಲಿ ಬೋರ್ ಕೊರೆಸಲು ಅರಣ್ಯ ಇಲಾಖೆ ಸಿಬ್ಬಂದಿ ತಡೆಯೊಡ್ಡಿರುವುದು ಎಷ್ಟರ ಮಟ್ಟಿಗೆ ಸರಿ? ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೋರ್ ಕೊರೆಸಲು ಅವಕಾಶ ನೀಡಬೇಕು. ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಗ್ರಾಮಸ್ಥನೊಬ್ಬ ಬೋರ್ ಕೊರೆಸಲು ಅವಕಾಶ ನೀಡದಿದ್ದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ. ಈ ವೇಳೆ ಗ್ರಾಮಸ್ಥರು ಇವರನ್ನು ತಡೆದು ಸಮಾಧಾನಪಡಿಸಿದರು. ಬಳಿಕ ಅಧಿಕಾರಿಗಳಿಂದ ಅನುಮತಿ ದೊರೆತ ನಂತರ ಬೋರ್ ಕೊರೆಸುವ ಕಾರ್ಯವನ್ನು ಮುಂದುವರಿಸಲಾಯಿತು. ಗ್ರಾಮಸ್ಥರು ಪ್ರತಿಭಟನೆಯನ್ನು ಕೈಬಿಟ್ಟರು.