ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಇದ್ದರೂ ತಮಿಳುನಾಡಿಗೆ ನೀರು ಹರಿಸಲು ಆದೇಶಿಸಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಕೊಳ್ಳೇಗಾಲ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಕುಡಿಯುವ ನೀರು ಹಾಗೂ ಬೆಳೆಗಳಿಗೆ ನೀರಿನ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶ ನೀಡಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಬುಧವಾರ ಪಟ್ಟಣದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಪಟ್ಟಣದ ಇಂದಿರಾ ಕ್ಯಾಂಟೀನ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಹಿತಾಸಕ್ತಿ ಕಾಪಾಡಬೇಕು, ಮೊದಲು ಕರ್ನಾಟಕದ ರೈತರ ಅಗತ್ಯಗಳಿಗೆ ಆದ್ಯತೆ ನೀಡಬೇಕು ಹಾಗೂ ಬರಗಾಲದ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ಅನೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ರೈತರು ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ಹೊರ ರಾಜ್ಯಕ್ಕೆ ನೀರು ಹರಿಸುವುದು ನ್ಯಾಯ ಸಮ್ಮತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ನಂತರ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆಯನ್ನು ಮುಕ್ತಾಯಗೊಳಿಸಿದರು.
ರಾಜ್ಯ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಜಯರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಜಿಲ್ಲಾ ಉಪಾಧ್ಯಕ್ಷ ಅರೇಪಾಳ್ಯ ನಾಗರಾಜು, ಜಿಲ್ಲಾ ಆಹ್ವಾನಿತ ಸದಸ್ಯ ಕಚೇರಿ ಮಹದೇವ, ತಾಲೂಕು ಗೌರವಾಧ್ಯಕ್ಷ ಪಿ.ಮಹದೇವ, ತಾಲೂಕು ಪ್ರಧಾನ ಕಾರ್ಯದರ್ಶಿ ಎಂ. ಪುಟ್ಟೇಗೌಡ, ರೈತ ರಾದ ಚಾರ್ಲಿ, ಮಲ್ಲಪ್ಪ, ಚಿಕ್ಕಣ್ಣ, ಸಿದ್ದರಾಜು, ಸುಂದ್ರಪ್ಪ, ಕುಣಗಳ್ಳಿ ರಂಗಸ್ವಾಮಿ ಇದ್ದರು.