ಕೊಪ್ಪ ಗ್ರಾಮದಲ್ಲಿ ಜಾನುವಾರುಗಳ ತೊಟ್ಟಿಯಲ್ಲಿ ನೀರಿಲ್ಲದಿರುವುದು.  
ಚಾಮರಾಜನಗರ

ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಿ

ಕಿರಣ್ ಗೌಡ.ಜಿ

ಪ್ರಮುಖ ಮುಖ್ಯಾಂಶಗಳು

  • ಕೊಪ್ಪ ಗ್ರಾಮದ ರೈತರ ಒತ್ತಾಯ
ಹನೂರು : ತಾಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದಲ್ಲಿ ತೊಟ್ಟಿಗೆ ನೀರು ತುಂಬಿಸುವುದರ ಮೂಲಕ ಜಾನುವಾರುಗಳ ಕುಡಿಯುವ ನೀರಿಗೆ ಅನುಕೂಲ ಕಲ್ಪಿಸುವಂತೆ ರೈತರು ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ಹೆಚ್ಚು ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಸುಮಾರು 500ಕ್ಕೂ ಹೆಚ್ಚು ದನ ಕರುಗಳಿವೆ. ಹಿಂದೆ ಹಳ್ಳಕೊಳ್ಳದಲ್ಲಿ ನೀರು ಹರಿಯುತ್ತಿದ್ದ ಪರಿಣಾಮ ಜಾನುವಾರುಗಳಿಗೆ ಯಾವುದೇ ಸಮಸ್ಯೆ ಇರಲಿಲ್ಲ. ಇದೀಗ ಬೇಸಿಗೆ ಆಗಮಿಸಿರುವುದರಿಂದ ಹಳ್ಳಕೊಳ್ಳಗಳು ಬತ್ತಿ ಹೋಗಿವೆ. ಇದರಿಂದ ಜಾನುವಾರುಗಳಿಗೆ ಕುಡಿವ ನೀರಿಗೆ ಸಮಸ್ಯೆಯಾಗಿದೆ. ಗ್ರಾಮದಲ್ಲಿನ 3 ತೊಟ್ಟಿಗಳಿಗೆ ನೀರು ತುಂಬಿಸುವಂತೆ ಪಿಡಿಒ ಅವರಿಗೆ ಕಳೆದ 15 ದಿನದ ಹಿಂದೆಯೇ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಕ್ರಮವಹಿಸಿಲ್ಲ. ಇದರಿಂದ ಜಾನುವಾರುಗಳು ನಿತ್ಯ ನೀರಿಗಾಗಿ ಪರಿತಪಿಸುವಂತಾಗಿದೆ.
ರೈತರು ಜಾನುವಾರುಗಳಿಗೆ ನೀರುಣಿಸುವುದೇ ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು, ತುಂಬ ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ತಾಲೂಕು ಪಂಚಾಯಿತಿ ಅಧಿಕಾರಿಗಳು ಇತ್ತ ಗಮನಹರಿಸಿ ಗ್ರಾಮದ ತೊಟ್ಟಿಗಳಿಗೆ ನೀರು ತುಂಬಿಸುವುದರ ಮೂಲಕ ಜಾನುವಾರುಗಳಿಗೆ ಅನುಕೂಲ ಕಲ್ಪಿಸುವಂತೆ ಭಾರತೀಯ ಕಿಸಾನ್ ಸಂಘದ ಕೊಪ್ಪ ಗ್ರಾಮ ಘಟಕದ ಅಧ್ಯಕ್ಷ ನಾಗರಾಜು ಒತ್ತಾಯಿಸಿದ್ದಾರೆ.